ಬೆಳಗಾವಿ:ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗಿನ ಜಾವ ಸುಮಾರು 5 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಘಟನೆಯಲ್ಲಿ ಹೆಬ್ಬಾಳ್ಕರ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಲಕ್ಷ್ಮೀ ಹೆಬ್ಬಾಳ್ಳರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿಗೆ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ.
ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ (ETV Bharat) ಕಾರು ಜಖಂ, ತೆರೆದುಕೊಂಡ ಏರ್‌ಬ್ಯಾಗ್: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಿಂದ ಏರ್‌ಬ್ಯಾಗ್‌ಗಳು ತೆರೆದುಕೊಂಡಿರುವುದನ್ನು ಚಿತ್ರದಲ್ಲಿ ಕಾಣಬಹುದು.
ಲಕ್ಷ್ಮೀ ಹೆಬ್ಬಾಳ್ಳರ್ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದೆ. ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆನ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಆತಂಕದ ಅವಶ್ಯಕತೆ ಇಲ್ಲ- ಪುತ್ರ ಮೃಣಾಲ್: ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದು, "ತಾಯಿಯ ಬೆನ್ನಿಗೆ ಎರಡ್ಮೂರು ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ರಾತ್ರಿ ಸಿಎಲ್ಪಿ ಮೀಟಿಂಗ್ ಮುಗಿಸಿ ಬೆಳಿಗ್ಗೆ ವಿಮಾನದಲ್ಲಿ ಬರಬೇಕಾಗಿತ್ತು. ಆದರೆ, ಇಂದು ಬೆಳಗ್ಗೆ ಕ್ಷೇತ್ರದಲ್ಲಿ ಎರಡ್ಮೂರು ಮುಖ್ಯವಾದ ಕೆಲಸಗಳಿರುವ ಹಿನ್ನೆಲೆಯಲ್ಲಿ ರಸ್ತೆ ಮೂಲಕ ಆಗಮಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ದೇವರು ಮತ್ತು ಜನರ ಆಶೀರ್ವಾದದಿಂದ ದೊಡ್ಡ ಗಾಯಗಳೇನೂ ಆಗಿಲ್ಲ. ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಷೇತ್ರದ ಜನರು, ಅಭಿಮಾನಿಗಳು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ" ಎಂದು ತಿಳಿಸಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿದ್ದ ಕಾರು ಅಪಘಾತ (ETV Bharat) ಹೆಬ್ಬಾಳ್ಕರ್ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯ- ವೈದ್ಯರು: ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ ಪ್ರತಿಕ್ರಿಯಿಸಿ, "ಬೆಳಗ್ಗೆ 6.15ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಇನ್ನು ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗನ್ ಮ್ಯಾನ್ ಮತ್ತು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಎರಡು ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಲಿದ್ದಾರೆ. ಆದರೆ, ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ" ಎಂದು ಮಾಹಿತಿ ನೀಡಿದರು.
ಎಸ್ಪಿ ಹೇಳಿಕೆ: "ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿದ್ದ ಕಾರು ಸರ್ಕಾರದ್ದು, ಸರ್ಕಾರಿ ಚಾಲಕರೇ ಚಲಾಯಿಸುತ್ತಿದ್ದರು. ಬೆಂಗಾವಲು ಪಡೆ ವಾಹನ ಕ್ಯಾಂಟರ್ ಮುಂದಿತ್ತು. ಅಡ್ಡ ಬಂದ ಯಾವುದೋ ಪ್ರಾಣಿಯ ಜೀವ ಉಳಿಸಲು ಮತ್ತು ಮುಂದಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದ್ದರಿಂದ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಯ ಪಕ್ಕದ ಮರಕ್ಕೆ ಕಾರು ಡಿಕ್ಕಿಯಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾಹಿತಿ ನೀಡಿದರು.
ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು (ETB Bharat) "ಸಚಿವರು ಬೆಳಗಾವಿಯ ವಿಜಯಾ ಆರ್ಥೋ ಮತ್ತು ಟ್ರಾಮಾ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಸಣ್ಣ ಗಾಯವಾಗಿದ್ದು, ಇಲ್ಲಿ ಚಿಕಿತ್ಸೆ ಪಡೆದಿರುವ ಅವರು ಮನೆಗೆ ಹೋಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಚಾಲಕ ಮತ್ತು ಗನ್ ಮ್ಯಾನ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ಎಸ್ಪಿ ತಿಳಿಸಿದ್ದಾರೆ.
ಇದನ್ನೂ ಓದಿ: ಎಲ್ಲ ಪಕ್ಷಗಳ ಶಾಸಕರಿಗೆ ತಲಾ 10 ಕೋಟಿ ರೂಪಾಯಿ ಅನುದಾನ: ಸಿಎಂ ಸಿದ್ದರಾಮಯ್ಯ
ಇದನ್ನೂ ಓದಿ:ಹಾವೇರಿ: ಟೋಲ್ಗೇಟ್ ಹಾಕಿದ್ದರೂ ಸ್ಕೂಟಿ ಚಾಲನೆ; ತಡೆಗಂಬ ಬಡಿದು ಪತ್ನಿ ಸಾವು