ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ಐಎಲ್ ಇದೀಗ ಆಕರ್ಷಕ ಟೂರ್ ಪ್ಯಾಕೇಜ್ ನೀಡಲು ಮುಂದಾಗಿದೆ. ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು.
ಆಫ್ಲೈನ್ ಪ್ರವಾಸಿಗರಿಗೆ ಆದ್ಯತೆ:ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಎಂಎಸ್ಐಎಲ್ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಈ ಪ್ಯಾಕೇಜುಗಳ ಅಡಿಯಲ್ಲಿ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ ಎಂದರು.
ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ ಕಂತುಗಳಲ್ಲಿ ಹಣ ಪಾವತಿ, ಲಕ್ಕಿ ಡ್ರಾ, ಕೈಗೆಟುಕುವ ವೆಚ್ಚದಲ್ಲಿ ಉತ್ತರ ಭಾರತ ಪ್ರವಾಸ ಮುಂತಾದ ಸೌಲಭ್ಯ ಮತ್ತು ಆಕರ್ಷಣೆಗಳಿವೆ. ಗುಂಪು ಪ್ರವಾಸ ಮಾಡಲು ಬಯಸುವವರಿಗೆ ಪ್ರತಿ ಬ್ಯಾಚಿನಲ್ಲಿ ಗರಿಷ್ಠ 100 ಮಂದಿಗೆ ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದರು.
ಎಲ್ಲಾ ವರ್ಗದವರಿಗೂ ಅನುಕೂಲಕರ ಪ್ರವಾಸ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆಂದು ʻಸ್ಟಡಿ-ಕಂ-ಪ್ಲೆಷರ್ ಟೂರ್, ಇಕೋ ಟೂರಿಸಂ ಮತ್ತು ಕರಾವಳಿ ಪ್ರದೇಶಗಳ ವೀಕ್ಷಣೆ ಇರುವ ಕೋಸ್ಟಲ್ ಟೂರಿಸಂ ಮುಂತಾದ ಪ್ಯಾಕೇಜುಗಳನ್ನು ರೂಪಿಸಲು ಚಿಂತಿಸುತ್ತಿದೆ. ಸಂಸ್ಥೆಯು ಸದ್ಯಕ್ಕೆ ರೂಪಿಸಿರುವ ಪ್ಯಾಕೇಜಿನಲ್ಲಿ ಕೇವಲ 20 ಸಾವಿರ ರೂ. ವೆಚ್ಚದಲ್ಲಿ 15ರಿಂದ 18 ದಿನಗಳ ಉತ್ತರ ಭಾರತ ಪ್ರವಾಸ ಮಾಡಿಕೊಂಡು ಬರಬಹುದು.
ಸರಕಾರಿ ಉದ್ಯೋಗಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಪ್ಯಾಕೇಜಿನಲ್ಲಿ ಮೊದಲು ಶೇ.50ರಷ್ಟು ಹಣ ಪಾವತಿಸಿ, ಪ್ರವಾಸ ಕೈಗೊಳ್ಳಬಹುದು. ಪ್ರವಾಸ ಮುಗಿಸಿಕೊಂಡು ಬಂದ ಬಳಿಕ ಉಳಿದ ಶೇ.50ರಷ್ಟು ಹಣವನ್ನು ಮಾಸಿಕ ಕಂತುಗಳಲ್ಲಿ ಕಟ್ಟಬಹುದು. ಹಾಗೆಯೇ ಲಕ್ಕಿ ಡ್ರಾದಲ್ಲಿ ವಿಜೇತರಾಗುವ ಅದೃಷ್ಟಶಾಲಿಗಳು ಡ್ರಾ ನಂತರದ ಹಣವನ್ನು ಪಾವತಿಸಬೇಕಾಗಿಲ್ಲ. ಈ ಎಲ್ಲ ಪ್ಯಾಕೇಜುಗಳಲ್ಲೂ ಎಂಎಸ್ ಐಎಲ್ ವತಿಯಿಂದ ಟೂರ್ ಮ್ಯಾನೇಜರ್ ಅಥವಾ ಸಹಾಯಕರೊಬ್ಬರು ಜತೆಗಿರಲಿದ್ದು, ಪ್ರವಾಸಿಗರ ಬೇಕು-ಬೇಡಗಳನ್ನು ಆಲಿಸಿ, ನೆರವು ನೀಡಲಿದ್ದಾರೆ.