ಬೆಂಗಳೂರು: ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ.ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಅವರು, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, "ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು" ಎಂದರು. ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜೊತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಎಂ, ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತೋಷವಾಗಿದೆ. ನಮ್ಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ ಎಂದರು.