ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ. ಈ ಸಂಬಂಧ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯ. ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು. ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂಬ ಮಾಹಿತಿ ಮಾರ್ಗಸೂಚಿಗಳಲ್ಲಿದೆ. ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ ಮಾಹೆಯ 26, ಏಪ್ರಿಲ್ ಮಾಹೆಯ 24, ಆಗಸ್ಟ್ ಮಾಹೆಯ 15 ಮತ್ತು ಅಕ್ಟೋಬರ್ ಮಾಹೆಯ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗ್ರಾಮ ಸಭೆಗಳನ್ನು ಆಯೋಜಿಸುವ ಸಂಬಂಧ ತಾ.ಪಂ ಕಾರ್ಯಾನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನೂ ಸಹ ಈ ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿರುವ ಸಚಿವರು, ತಾಲೂಕು ಪಂಚಾಯತಿಗಳ ಕಾರ್ಯಾನಿರ್ವಾಹಕ ಅಧಿಕಾರಿಗಳು ತಮ್ಮ ಜವಾಬ್ದಾರಿಯಲ್ಲಿ ಲೋಪವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದ್ದಾರೆ.