ಬೆಂಗಳೂರು : ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿವೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸಚಿವರು ಪತ್ರ ಬರೆದಿದ್ದು, ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿ ಆದ್ಯ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ, ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ.
ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹ, ಕೆಲವು ಗ್ರಾಮ/ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡು ಬಂದಿದೆ ಎಂದೂ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.