ಬೆಳಗಾವಿ:ಸದ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವಾಗಿದ್ದಾರೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾವು ಬಯಸುತ್ತೇವೆ. ವೈದ್ಯರು ಕೂಡ ಹೆಬ್ಬಾಳ್ಕರ್ ಅವರು ಶೀಘ್ರವೇ ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗುರುವಾರ ರಾತ್ರಿ ಸತೀಶ್ ಜಾರಕಿಹೊಳಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ. ಚೇತರಿಸಿಕೊಳ್ಳಲು ಇನ್ನೂ ನಾಲ್ಕೈದು ದಿನ ಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ನಾವು ಕೂಡ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಆಸ್ಪತ್ರೆಯಲ್ಲೆ ಇರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದೇವೆ. ಯಾಕೆಂದರೆ ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ದೊರೆಯುತ್ತದೆ. ಅವರು ಚೇತರಿಸಿಕೊಳ್ಳಲು ಇನ್ನೂ ಒಂದು ವಾರ ಅಥವಾ ಹತ್ತು ದಿನ ಸಮಯಾವಕಾಶ ಬೇಕಾಗುತ್ತದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ರವಿ ಪಾಟೀಲ ಮಾತನಾಡಿ, ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಮೊದಲ ದಿನದ ಎಂಆರ್ಐ ಸ್ಕ್ಯಾನ್, ಅಲ್ಟ್ರಾ ಸೌಂಡ್ ಸ್ಕ್ಯಾನ್ ವರದಿಗೂ ಇಂದು ಮಾಡಿದ ಪರೀಕ್ಷೆಯಲ್ಲಿ ಬಹಳಷ್ಟು ಸುಧಾರಣೆ ಕಾಣಿಸಿದೆ. ಯಾವುದೇ ತೀವ್ರತರವಾದ ಗಾಯ ಕಂಡುಬಂದಿಲ್ಲ ಎಂದರು.