ಬೆಂಗಳೂರು: ತುಮಕೂರು ರೈಲು ನಿಲ್ದಾಣಕ್ಕೆ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸೋಮಣ್ಣ, 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಧಾನಿಗೆ ವಿವರಿಸಿದ್ದಾರೆ.
ಬೆಂಗಳೂರು ಸಬ್ ಅರ್ಬನ್ ರೈಲ್ವೆ, ವರ್ತುಲ ರೈಲ್ವೆ ಇತ್ಯಾದಿಗಳ ಬಗ್ಗೆ ಎರಡು ಸುತ್ತಿನ ಸಭೆ ನಡೆಸಿರುವ ಬಗ್ಗೆ ವಿ.ಸೋಮಣ್ಣ ವಿವರಿಸಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು-ರಾಯದುರ್ಗ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆಯನ್ನು ಕೇವಲ 3 ತಿಂಗಳ ಅವಧಿಯಲ್ಲಿ ಶೇ 90ಕ್ಕಿಂತಲೂ ಮಿಗಿಲಾಗಿ ಮುಗಿಸಿರುವ ಬಗ್ಗೆ ಸೋಮಣ್ಣ ಮಾಹಿತಿ ನೀಡಿದ್ದಾರೆ.