ಬೆಂಗಳೂರು :ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಅವರು, ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವ ಇದ್ದು, ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಿದ್ದೇವೆ. ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬುದು ನನ್ನ ಅಭಿಪ್ರಾಯ ಆಗಿತ್ತು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ತನಿಖೆ ನಡೆಯಲಿ, ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್, ಶಾಸಕರು, ಸಚಿವರು ಮುಖ್ಯಮಂತ್ರಿ ಜತೆ ಇದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ಪ್ರಶ್ನೆ ಇಲ್ಲ ಎಂದು ನಿನ್ನೆ ಮಾಧ್ಯಮ ಮಿತ್ರರ ಜತೆ ಮಾತನಾಡುತ್ತಾ ಹೇಳಿದ್ದೆ. ಅದು ಹೊರತು ಪಡಿಸಿ ನ್ಯಾಯಾಲಯದ ತೀರ್ಪಿನ ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಲಿಲ್ಲ. ರಾಜಕೀಯ ಪ್ರೇರಿತ ಆರೋಪ ಇದಾಗಿದೆ ಎಂಬುದೇ ನನ್ನ ವಾದ ಆಗಿತ್ತು. ನನಗೆ ಎಂದಿಗೂ ನ್ಯಾಯಾಲಯದ ಬಗ್ಗೆ ಅತ್ಯಂತ ಹೆಚ್ಚಿನ ಗೌರವ ಇದೆ ಎಂಬುದನ್ನು ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ. ಒಂದೊಮ್ಮೆ ಬಾಯಿ ತಪ್ಪಿ ಹೇಳಿದ್ದರೆ ಕ್ಷಮೆ ಯಾಚಿಸಲು ಸಿದ್ದ ಎಂದು ಹೇಳಿದ್ದಾರೆ.