ಬೆಂಗಳೂರು:ಕಿಡಿಗೇಡಿಗಳು ಮೂರುಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ನಗರದ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ರಸ್ತೆಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದಿದ್ದು, ಮೂಕರೋಧನೆ ಅನುಭವಿಸುತ್ತಿದ್ದ ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. ಕಾಟನ್‌ಪೇಟೆ ಠಾಣೆ ಪೊಲೀಸ್ ಸಿಬ್ಬಂದಿ, ಚಿಕ್ಕಪೇಟೆ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ:ಹಸುವಿನ ಕೆಚ್ಚಲು ಕೊಯ್ದ ಕಿಡಿಗೇಡಿಗಳ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಸುಗಳ ಮಾಲೀಕ ಕರ್ಣ ನೀಡಿದ ದೂರಿನನ್ವಯ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಕಾಯ್ದೆಯಡಿ ಕೇಸು ದಾಖಲಿಸಿಕೊಳ್ಳಲಾಗಿದೆ. ಘಟನೆ ನಡೆದ ಪ್ರದೇಶದ ಸಿಸಿಟಿವಿ ಪರಿಶೀಲನೆ ನಡೆಸಿರುವ ಪೊಲೀಸರು, ಸ್ಥಳಿಯರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.