ಬೆಳಗಾವಿ:"ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ. ಅಧ್ಯಕ್ಷ ಸ್ಥಾನದಿಂದ ತಕ್ಷಣವೇ ಅವರನ್ನು ಬದಲಾವಣೆ ಮಾಡಬೇಕು" ಎಂದು ಶಾಸಕ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಯಡಿಯೂರಪ್ಪ ಹುಟ್ಟು ಹೋರಾಟಗಾರ. ಆದರೆ ವಿಜಯೇಂದ್ರ ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ಸಮನಲ್ಲ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿಕೊಂಡು ಓಡಾಡುವ ವಯಸ್ಸು ಅವರದ್ದು. ಇನ್ನೂ ನಾಲ್ಕು ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು" ಎಂದು ವಾಗ್ದಾಳಿ ನಡೆಸಿದರು.
ಸಮರ್ಥರಿಗೆ ಅಧ್ಯಕ್ಷ ಸ್ಥಾನ ಕೊಡಿ:"ಬಸನಗೌಡ ಪಾಟೀಲ ಯತ್ನಾಳ್ ಅಥವಾ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ. ಒಂದೇ ಸಮುದಾಯಕ್ಕೆ ಸೀಮಿತವಾದವರಿಗೆ ಅಧ್ಯಕ್ಷ ನಮಗೆ ಬೇಡ. ಎಲ್ಲರನ್ನೂ ಸಮಾನವಾಗಿ ಕಾಣಲು ಸಮರ್ಥರಿದ್ದವರಿಗೆ ಮಾತ್ರ ಅಧ್ಯಕ್ಷ ಸ್ಥಾನ ಕೊಡಿ" ಎಂದ ಅವರು, ಯತ್ನಾಳ್ಗೆ ಬಿಜೆಪಿ ಕೇಂದ್ರ ಸಮಿತಿಯಿಂದ ಶೋಕಾಸ್ ನೋಟಿಸ್ ವಿಚಾರದ ಕುರಿತು ಮಾತನಾಡಿ, "ಯತ್ನಾಳ್ಗೆ ಶೋಕಾಸ್ ನೋಟಿಸ್ ಇಂದು ಬಂದಿದ್ದಲ್ಲ. ಎರಡು ದಿನಗಳ ಹಿಂದೆಯೇ ಬಂದಿದೆ. ಆದರೆ, ಮಾಧ್ಯಮಗಳಲ್ಲಿ ಇಂದು ತೋರಿಸುತ್ತಿದ್ದಾರೆ. ನಾವು ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ. ಕೇಂದ್ರ ನಾಯಕರ ಮನವೊಲಿಸುತ್ತೇವೆ" ಎಂದು ತಿಳಿಸಿದರು.