ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ತಮ್ಮ ರಾಜಕೀಯ ಜೀವನ ಮುಗಿದೇ ಹೋಯಿತು ಎಂದು ಭಾವಿಸಿದ್ದ ಬಿಜೆಪಿ, ಜೆಡಿಎಸ್ನ ಮಾಜಿ ಶಾಸಕರಿಗೆ ಲೋಕಸಭೆ ಚುನಾವಣೆ ರಾಜಕೀಯ ಮರುಜನ್ಮ ನೀಡಿದೆ. ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಚಿವ ವಿ ಸೋಮಣ್ಣ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ್ ಸೇರಿದಂತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ 6 ಜನರು ಜಯ ಸಾಧಿಸಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸಭೆ ಚುನಾವಣೆಯಲ್ಲಿ ಸೋತವರನ್ನೂ ತಮ್ಮ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದ್ದವು. ಜನಪ್ರತಿನಿಧಿಗಳನ್ನಾಗಿ ಅವರನ್ನು ಆಯ್ಕೆ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡಿದ್ದವು. ಈ ಸದಾವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡ ಮಾಜಿ ಶಾಸಕರುಗಳು ಲೋಕಸಭೆ ಚುನಾವಣೆಯಲ್ಲಿ ಮತದಾರರ ಮನಸ್ಸನ್ನು ಗೆದ್ದು ಸಂಸತ್ ಭವನ ಪ್ರವೇಶ ಮಾಡಿದ್ದಾರೆ.
2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಶಿರಸಿ ಕ್ಷೇತ್ರದಲ್ಲಿ ಸೋತಿದ್ದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುಧೋಳ್ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ್ ಅವರು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದು ಸಂಸತ್ಗೆ ಎಂಟ್ರಿ ಕೊಟ್ಟಿದ್ದಾರೆ.
ಮೈಸೂರಿನ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ವಿಧಾನಸಭೆ ಅಭ್ಯರ್ಥಿಯಾಗಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದ ಮಾಜಿ ಸಚಿವ ವಿ ಸೋಮಣ್ಣ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸುವ ಮೂಲಕ ರಾಜಕೀಯ ಮರು ಜನ್ಮ ಪಡೆದಿದ್ದಾರೆ.