ಬೆಂಗಳೂರು: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕಾದರೆ ದಕ್ಷಿಣ ಕರ್ನಾಟಕದ ಸದಸ್ಯರ ಮಾದರಿಯಲ್ಲಿ ಉತ್ತರ ಕರ್ನಾಟಕ ಎಲ್ಲಾ ಶಾಸಕರು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾದ ಅಗತ್ಯತೆ ಇದೆ ಮತ್ತು ಸಮ ಸಮಾಜದಂತೆ ಸಮ ಪ್ರಾಂತ್ಯ ನಿರ್ಮಾಣದ ಅನಿವಾರ್ಯತೆ ಇದೆ ಎಂದು ಉತ್ತರ ಕರ್ನಾಟಕ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಮತ್ತು ಸಮಸ್ಯೆಗಳ ಮೇಲಿನ ಚರ್ಚೆಯಲ್ಲಿ ಆ ಭಾಗದ ಸದಸ್ಯರು ಪಕ್ಷಾತೀತವಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಅಗತ್ಯ ಇದೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿ, ದಕ್ಷಿಣ ಕರ್ನಾಟಕವು ಉತ್ತರ ಕರ್ನಾಟಕಕ್ಕಿಂತ ಸಾಕಷ್ಟು ಅಭಿವೃದ್ಧಿಯಾಗಿದೆ. ಅಲ್ಲಿನ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಒಗ್ಗಟ್ಟು ಪ್ರದರ್ಶಿಸಿ ತಮಗೆ ಬೇಕಾದ ಅನುದಾನವನ್ನು ಪಡೆದುಕೊಳ್ಳುತ್ತಾರೆ. ಅದೇ ರೀತಿಯಲ್ಲಿ ಉತ್ತರ ಕರ್ನಾಟಕ ಶಾಸಕರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಒಗ್ಗಟ್ಟಿನೊಂದಿಗೆ ಹೋರಾಟ ನಡೆಸಬೇಕು. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೋಲಿಕೆ ಮಾಡಿದರೆ ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಎಲ್ಲವೂ ದಕ್ಷಿಣ ಕರ್ನಾಟಕದಲ್ಲಿಯೇ ಇವೆ. ಜಿಡಿಪಿ ದರದಲ್ಲಿ ಮೊದಲ 10 ಜಿಲ್ಲೆಗಳು ದಕ್ಷಿಣ ಕರ್ನಾಟಕದಲ್ಲಿವೆ. ಬೆಂಗಳೂರಲ್ಲಿ ಸುಮಾರು 70 ಸಾವಿರ ಕಂಪನಿಗಳಿದ್ದರೆ ಉತ್ತರ ಕರ್ನಾಟಕದಲ್ಲಿ ಕೇವಲ ಏಳು ಕೈಗಾರಿಕೆಗಳಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಸರ್ಕಾರಿ ಉದ್ಯಮಗಳು ಸಹ ಇಲ್ಲ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಂತಾರಾಷ್ಟ್ರೀಯ ಕ್ರೀಡಾ ಸ್ಟೇಡಿಯಂ ಇದೆ. ತುಮಕೂರಿಗೆ ಮತ್ತೊಂದು ಸ್ಟೇಡಿಯಂ ಕೊಂಡೊಯ್ಯಲಾಗುತ್ತಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿಯೂ ಅಭಿವೃದ್ಧಿಯಾಗಿದೆ. ಆದರೆ, ಉತ್ತರ ಕರ್ನಾಟಕದಲ್ಲಿ ಅತ್ಯುತ್ತಮ ಪ್ರವಾಸಿ ತಾಣಗಳಿದ್ದರೂ ಅಭಿವೃದ್ಧಿಯಲ್ಲಿ ಕುಂಟುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮಾತನಾಡಿ, ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಶೇ.40ರಷ್ಟು ಹುದ್ದೆಗಳು ಖಾಲಿ ಇವೆ. ಶಿಕ್ಷಕರ ಹುದ್ದೆಗಳು ಸಹ ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಿದರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಸರ್ಕಾರವು ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಕ ಮಾಡಿಕೊಂಡಿದೆ. ಆದರೆ, ಅವರಿಗೆ ಉತ್ತರದಾಯಿತ್ವ ಇರುವುದಿಲ್ಲ. ಹೀಗಾಗಿ ಕಾಯಂ ಶಿಕ್ಷಕರನ್ನು ನೇಮಕ ಮಾಡಬೇಕಾಗಿದ್ದು, ಅವರಿಗೆ ಜವಾಬ್ದಾರಿ ಇರುತ್ತದೆ ಎಂದರು.