ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ಸಂಸ್ಥೆಯಿಂದ ನಡೆಯುತ್ತಿರುವ ವಸತಿ ಶಾಲೆಗಳಲ್ಲಿನ ಶಿಕ್ಷಣ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ಸಾಕಷ್ಟು ಲೋಪಗಳಾಗಿವೆ ಎಂದು ಆಡಳಿತ ಹಾಗೂ ಪ್ರತಿಪಕ್ಷಗಳ ಶಾಸಕರು ಪಕ್ಷಬೇಧ ಮರೆತು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕಿ ರೂಪಕಲಾ, ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳ ಲೋಪಗಳನ್ನು ವಿವರಿಸಿದರು. ಸಿಬ್ಬಂದಿ ಕೊರತೆ, ಶೈಕ್ಷಣಿಕ ವಾತಾವರಣ, ಸುರಕ್ಷತೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಬೇಡಿಕೆಗೆ ಅನುಸಾರವಾಗಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶ ಇಲ್ಲ ಎಂಬ ವಿಚಾರವನ್ನು ಸದನದ ಗಮನಕ್ಕೆ ತಂದರು.
ಕ್ರೈಸ್ ಸಂಸ್ಥೆಯ ಶಾಲೆಗಳಿಗೆ ಮುರಾರ್ಜಿ ವಸತಿ ಶಾಲೆಯ ನಿರ್ವಹಣೆಗೆ ನೀಡುವಷ್ಟೇ ಅನುದಾನ ನೀಡಲಾಗುತ್ತಿದೆ. ಆದರೂ ಗುಣಮಟ್ಟದಲ್ಲಿ ಸಮಾಜ ಕಲ್ಯಾಣ ಶಾಲೆಗಳು ಕಳಪೆಯಾಗಿವೆ. ಇಲಾಖೆಯ ಉಪ ನಿರ್ದೇಶಕರೇ ಗುತ್ತಿಗೆದಾರರಾಗಿದ್ದಾರೆ. ಸಮುದಾಯ ಭವನಗಳ ನಿರ್ಮಾಣಕ್ಕೆ ವರ್ಷಕ್ಕೆ 1,300 ಕೋಟಿ ಖರ್ಚು ಮಾಡಲಾಗುತ್ತಿದೆ. ಶೋಷಿತರ ಶಿಕ್ಷಣ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವುದನ್ನು ಸರ್ಕಾರ ರೂಢಿಸಿಕೊಳ್ಳಬೇಕು ಎಂದು ರೂಪಕಲಾ ಆಗ್ರಹಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಪರವಾಗಿ ಉತ್ತರ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಇತ್ತೀಚಿಗೆ ನಡೆದ ಎಸ್‌ಸಿಪಿ ಮತ್ತು ಟಿಎಸ್ಪಿ ಪರಿಷತ್ ಸಭೆಯಲ್ಲಿ ಕ್ರೈಸ್ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಅನುದಾನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ಹಾಸ್ಟೆಲ್ಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ವಿಚಾರದಲ್ಲಿ ರಾಜಿ ಇಲ್ಲ ಎಂದು ಹೇಳಿದರು.
ಪ್ರತಿ ವರ್ಷ 40,555 ವಿದ್ಯಾರ್ಥಿಗಳ ದಾಖಲಾತಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 68 ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ವಸತಿ ಶಾಲೆಗಳನ್ನು ನಿರ್ವಹಿಸಲಾಗುತ್ತಿದೆ, ಇಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 8,500 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಂಜೂರಾತಿ ಇದೆ. ವಾರ್ಷಿಕ ಸರಾಸರಿ ಆರು ಸಾವಿರದಿಂದ 6,500 ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ. ಪ್ರಸಕ್ತ ವರ್ಷ 6,059 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ 821 ವಸತಿ ಶಾಲೆಗಳು ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ವಾರ್ಷಿಕವಾಗಿ 2,11,920 ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆರರಿಂದ 12ನೇ ತರಗತಿಯವರೆಗೂ 1,91,448 ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿ ವರ್ಷ 40,555 ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಇದರ ಮಧ್ಯೆ ಮಾತನಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಹಿರಿಯೂರಿನ ವಸತಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಹಾಗೂ ಹಾವೇರಿ ಜಿಲ್ಲೆಯ ಮುರಾರ್ಜಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಿಗೆ ಮನೆಯ ವಾತಾವರಣ ಇಲ್ಲದೇ ಖಿನ್ನತೆ ಕಾಡುತ್ತಿದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ, ಸರ್ಕಾರ ಶಿಕ್ಷಣದ ಉದ್ದೇಶಕ್ಕಾಗಿ ಕ್ರೈಸ್ ಶಾಲೆಗಳನ್ನು ಆರಂಭಿಸಿತ್ತು. ಆದರೆ, ಈಗ ಅಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಇತರ ಗುತ್ತಿಗೆದಾರರದೇ ಆಡಳಿತವಾಗುತ್ತದೆ ಎಂದು ಆರೋಪಿಸಿದರು.