ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಪ್ರಮುಖವಾಗಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಎರಡು ದಿನಗಳಿಗೆ ಅನ್ವಯವಾಗುವಂತೆ ಹೈ ಅಲರ್ಟ್ಗಳನ್ನು ಘೋಷಿಸಲಾಗಿದೆ.
ಇಂದು ಸಂಜೆಯಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಾದ ಉಡುಪಿಗೆ ಕ್ರಮವಾಗಿ ಆರೆಂಜ್ ಮತ್ತು ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಎರೆಡೂ ದಿನ ಆರೆಂಜ್ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಇರಲಿದೆ. ಉಳಿದಂತೆ ನಾಳೆ ಉತ್ತರ ಕಾರಾಂತಕ ಭಾಗದ ಕಲ್ಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಕೊಡಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯ ವೇಗ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಎರಡು ದಿನ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 45 ರಿಂದ 55 ಕಿ.ಮೀ ಬೀಸಲಿದೆ, ಅತಿ ಭಾರಿ ಮಳೆಯಾಗಲಿದೆ. ಆದ್ದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚಿಸಿದೆ.