ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಳೆದ ಎರಡು ಬಾರಿಯಿಂದಲೂ ಸಂಸದರಾಗಿರುವ ಪ್ರತಾಪ್ ಸಿಂಹ ಮೂರನೇ ಬಾರಿಯೂ ಆಯ್ಕೆ ಬಯಸಿದ್ದು, ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಈ ಮಧ್ಯೆ ಕಳೆದ 10 ವರ್ಷಗಳಿಂದಲೂ ತಾವು ಮಾಡಿರುವ ಕೆಲಸಗಳ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ಈಗಾಗಲೇ ಪ್ರಚಾರ ಶುರು ಮಾಡಿದ್ದಾರೆ.
ಪ್ರತಾಪ್ ಸಿಂಹಗೆ ಗೆಲುವಿನ ಆತ್ಮವಿಶ್ವಾಸ:ಬಿಜೆಪಿ ಕಚೇರಿಯಲ್ಲಿ ಚುನಾವಣಾ ಪ್ರಚಾರದ ಕಚೇರಿಯನ್ನು ಆರಂಭ ಮಾಡಿ ಪ್ರಚಾರದಲ್ಲಿ ಸಂಸದ ಪ್ರತಾಪ್ ಸಿಂಹ ತೊಡಗಿದ್ದಾರೆ. ಈ ಮಧ್ಯೆ ಬಿಜೆಪಿಯಿಂದ ಹಲವು ಜನ ಆಕಾಂಕ್ಷಿಗಳು ಸಹ ಇದ್ದಾರೆ. ಸದ್ಯಕ್ಕೆ ಬಿಜೆಪಿ ಹೈ ಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತೆ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಮತ್ತೊಮ್ಮೆ ಹೈ ಕಮಾಂಡ್ ಟಿಕೆಟ್ ನೀಡಿದ್ರೆ ಈ ಬಾರಿ ಇನ್ನಷ್ಟು ಹೆಚ್ಚು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದ್ದರು. ಈ ಮೂಲಕ ಅವರು ಮತ್ತೊಮ್ಮೆ ನಾನು ಸಹ ಚುನಾವಣಾ ಕಣಕ್ಕೆ ಇಳಿಯುತ್ತೇನೆ. ಹ್ಯಾಟ್ರಿಕ್ ಗೆಲುವನ್ನು ಸಾಧಿಸುತ್ತೇನೆ ಎಂಬ ಆತ್ಮವಿಶ್ವಾಸದಲ್ಲಿದ್ದಾರೆ ಹಾಲಿ ಸಂಸದ ಪ್ರತಾಪ್ ಸಿಂಹ.
ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿ : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ದೊಡ್ಡ ಪಟ್ಟಿಯೇ ಇದೆ. ಅದರಲ್ಲಿ ಪ್ರಮುಖವಾಗಿ ಸಿದ್ದರಾಮಯ್ಯ ಅವರ ಮಗ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಬೆಂಬಲದೊಂದಿಗೆ ಡಾ. ಸುಶ್ರುತ್ ಗೌಡ, ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಸೇರಿದಂತೆ 21ಕ್ಕೂ ಹೆಚ್ಚಿನ ಆಕಾಂಕ್ಷಿಗಳು ಕಾಂಗ್ರೆಸ್ ಪಕ್ಷದಿಂದ ಇರುವುದು ಗಮನಾರ್ಹ. ಇದರಲ್ಲಿ 12 ಕ್ಕೂ ಹೆಚ್ಚು ಮಂದಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ ಅಂತಿಮವಾಗಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ಗೆ ಬಿಟ್ಟ ವಿಚಾರವಾಗಿದೆ.
ಮೈಸೂರು ಜಿಲ್ಲೆಯ ಮತದಾರರ ಪಟ್ಟಿ :ಮೈಸೂರು ಜಿಲ್ಲೆಯಾದ್ಯಂತ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 26,99,835 ಅರ್ಹ ಮತದಾರರಿದ್ದಾರೆ. ಈ ಪೈಕಿ 13,31,772 ಪುರುಷ ಮತದಾರರು, 13,67,843 ಮಹಿಳಾ ಮತದಾರರು ಮತ್ತು 220 ತೃತೀಯ ಲಿಂಗಿ ಮತದಾರರಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ 5 ಲಕ್ಷಕ್ಕೂ ಹೆಚ್ಚು ಮತದಾರರ ಸೇರ್ಪಡೆಯಾಗಿದೆ. ಮೈಸೂರು ಜಿಲ್ಲೆಯ ಜನ ಸಂಖ್ಯೆ ಅಂದಾಜು 35 ಲಕ್ಷದಷ್ಟಿದೆ. ಈ ಪೈಕಿ ಶೇಕಡ 75% ರಷ್ಟು ಮಂದಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಚಾಮುಂಡೇಶ್ವರಿ ಹಾಗು ನರಸಿಂಹರಾಜ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ 1950 ಮತದಾರರ ಸಹಾಯವಾಣಿ ನಂಬರ್ ಚಾಲ್ತಿಯಲ್ಲಿದೆ. ಸಾರ್ವಜನಿಕರು ಈ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.
ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು?: ಮೂರನೇ ಬಾರಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಟಿಕೆಟ್ ನೀಡಿದರೆ, ಜನ ಆಶೀರ್ವಾದ ಮಾಡಿದರೆ ಮೂರನೇ ಬಾರಿ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸವನ್ನು ಮಾಡುತ್ತೇನೆ. ಕಳೆದ ಎರಡು ಬಾರಿ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೆ ಎಂಬುದನ್ನು ಈಗಾಗಲೇ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ಸಿಕ್ಕರೆ ಗೆಲುವಿನ 'ಗ್ಯಾರೆಂಟಿ' : ನಾನು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಆದರೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುವುದು ಅನಿವಾರ್ಯ. ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರೆಂಟಿ ಯೋಜನೆಗಳಿಂದ ಜನ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಈಟಿವಿ ಭಾರತದ ಎದುರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಲಿದೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಬಿಜೆಪಿಯಿಂದ ಪ್ರತಾಪ್ ಸಿಂಹ ರೇಸ್ನಲ್ಲಿದ್ರೆ, ಕಾಂಗ್ರೆಸ್ನಲ್ಲಿ ತುಂಬಾ ಜನ ಆಕಾಂಕ್ಷಿಗಳಿದ್ದಾರೆ. ಈ ಮಧ್ಯೆ ಮೈಸೂರು ಜಿಲ್ಲಾಡಳಿತ ಚುನಾವಣೆ ನಡೆಸಲು ಮತದಾರರ ಪಟ್ಟಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.