ಮೈಸೂರು: "ಬುಡಕಟ್ಟು ಜನರ ಕಲ್ಯಾಣ, ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರಕಾರ ಕಟಿಬದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ದಿನ ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಸುಮಾರು ₹6,650 ಕೋಟಿ ಮೊತ್ತದ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ" ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಮೈಸೂರಿನಲ್ಲಿ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಜಮುಯಿನಿಂದ ಮಾತನಾಡಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೈಸೂರಿನಿಂದ ಪಾಲ್ಗೊಂಡಿದ್ದರು.
"ಶಿಕ್ಷಣ, ವಸತಿ, ಆರೋಗ್ಯ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸಿ ಬುಡಕಟ್ಟು ಸಮುದಾಯಗಳ ಹಾಡಿಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರಧಾನಿಗಳು ಇಷ್ಟು ಬೃಹತ್ ಮೊತ್ತದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳನ್ನು ಬುಡಕಟ್ಟು ಜನರು ಅತ್ಯಂತ ಉತ್ತಮವಾಗಿ ಬಳಕೆ ಮಾಡಿಕೊಳ್ಳಬೇಕು" ಎಂದು ಅವರು ಕರೆ ನೀಡಿದರು.
"ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರಬೇಕು ಎನ್ನುವ ಮಹಾ ಸಂಕಲ್ಪದೊಂದಿಗೆ ಪ್ರಧಾನಿಗಳು ಕೆಲಸ ಮಾಡುತ್ತಿದ್ದಾರೆ. ಕೇವಲ ನೂರೇ ಜನರು ವಾಸವಿದ್ದರೂ ಅಂಥ ಹಾಡಿಗಳಿಗೆ ನೇರ ರಸ್ತೆ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ. ಎಲ್ಲ ಹಾಡಿಗಳಿಗೂ ವಿದ್ಯುತ್ ಸಂಪರ್ಕ, ಟೆಲಿಕಾಂ ಸಂಪರ್ಕ, ಮಕ್ಕಳು ಮಹಿಳೆಯರಿಗೆ ಪೌಷ್ಟಿಕ ಆಹಾರ ಪೂರೈಕೆ, ಮೊಬೈಲ್ ಮೆಡಿಕಲ್ ಸೆಂಟರ್ಗಳು, ಅಂಗನವಾಡಿ ಕೇಂದ್ರಗಳ ಸ್ಥಾಪನೆ ಹಾಗೂ ಏಕಲವ್ಯ ಮಾದರಿ ಶಾಲೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸ್ಥಾಪನೆ ಮಾಡಿ ಬುಡಕಟ್ಟು ಜನರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಇದನ್ನು ಮೋದಿ ಅವರು ಇನ್ನೂ ದೊಡ್ಡ ಪ್ರಮಾಣದಲ್ಲಿ ಮುಂದುವರಿಸಿಕೊಂಡು ಹೋಗಲು ನಿರ್ಧರಿಸಿದ್ದಾರೆ" ಎಂದು ಕುಮಾರಸ್ವಾಮಿ ಅವರು ಹೇಳಿದರು.