ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಇದುವರೆಗೂ 8,362ಕ್ಕೂ ಅಧಿಕ ಫ್ಲೆಕ್ಸ್ ತೆರವುಗೊಳಿಸಿ 142 ಎಫ್‌ಐಆರ್ ದಾಖಲಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, 8,362ಕ್ಕೂ ಅಧಿಕ ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ 267 ದೂರುಗಳ ಪೈಕಿ 142 ಎಫ್‌ಐಆರ್ ದಾಖಲಾಗಿದೆ.
ನಗರದಲ್ಲಿ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳಿರದಂತೆ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲ ವಲಯದಲ್ಲೂ ಅನಧಿಕೃತ ಜಾಹೀರಾತುಗಳು ಇರದಂತೆ ನೋಡಿಕೊಳ್ಳಲು ಹಾಗೂ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಹೇಳಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ವಲಯ ಹಿರಿಯ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿ ವರದಿ ಪಡೆಯುತ್ತಾರೆ. ಜೂನ್ 1 ರಿಂದ ಇದುವರೆಗೂ 8,362 ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ 267 ದೂರುಗಳನ್ನು ದಾಖಲಿಸಲಾಗಿದೆ. ಅದರ ಆಧಾರದಲ್ಲಿ 142 ಎಫ್‌ಐಆರ್ ದಾಖಲಾಗಿ 1 ಲಕ್ಷ 3 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದಿದ್ದಾರೆ.
ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಜಾಹೀರಾತುಗಳು ಅಳಡಿಸುವುದರಿಂದ ನಾಗರಿಕರಿಗೆ ಸಾಕಷ್ಟು ಅನಾನುಕೂಲವಾಗಲಿದೆ. ಎಲ್ಲೆಂದರಲ್ಲಿ ಜಾಹೀರಾತು ಫಲಕಗಳು ಅಳವಡಿಸುವುದರಿಂದ ಪ್ರಾಣ ಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಈ ಸಂಬಂಧ ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.