ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿನ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ಮುಂದೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಜಿ.ಕುಮಾರ್ ನಾಯ್ಕ್ ಇಂದು ಹಾಜರಾಗಿ ವಿಚಾರಣೆ ಎದುರಿಸಿದರು.
ಶಾಂತಿನಗರದಲ್ಲಿರುವ ಜಾರಿ ನಿರ್ದೇಶಾನಾಲಯ ಕಚೇರಿಗೆ ಆಗಮಿಸಿದ ಕುಮಾರ್ ನಾಯ್ಕ್ ಅವರನ್ನು ಇಂದು ಆರೂವರೆ ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. 2002ರಿಂದ 2005ರವರೆಗೆ ಮೈಸೂರು ಜಿಲ್ಲಾಧಿಕಾರಿಯಾಗಿ ಕುಮಾರ್ ನಾಯ್ಕ್ ಅವರು ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ ಕೃಷಿ ಭೂಮಿಯನ್ನ ಕೃಷಿಯೇತರ ಭೂಮಿಯಾಗಿ ಪರಿವರ್ತಿಸಿದ್ದರು. ಈ ಸಂಬಂಧ ವಿಚಾರಣೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು.