ಬೆಂಗಳೂರು:ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ತಂಡದ ಸಂಪೂರ್ಣ ನಿಗಾದಲ್ಲಿ ಸಂಸದರು ಚಿಕಿತ್ಸೆ ಪಡೆಯುತ್ತಿದ್ದಾರೆ.
ವಯೋಸಹಜ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅನಾರೋಗ್ಯದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಂಸದರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದ್ದರೂ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಶ್ರೀನಿವಾಸ್ ಪ್ರಸಾದ್ ಆರೋಗ್ಯ ಕುರಿತು ಮಾಹಿತಿ ನೀಡಿರುವ ಮಣಿಪಾಲ್ ಆಸ್ಪತ್ರೆ ಚೇರ್ಮನ್ ಡಾ. ಸುದರ್ಶನ್ ಬಲ್ಲಾಳ್, ''ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಕಳೆದ 25 ವರ್ಷದಿಂದ ನಮ್ಮ ಬಳಿಯೇ ಚಿಕಿತ್ಸೆಗೆ ಬರುತ್ತಿದ್ದಾರೆ. ಏಪ್ರಿಲ್ 22 ರಂದು ಇನ್‌ಫೆಕ್ಷನ್ ಅಂತಾ ಬಂದು ನಮ್ಮ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಶುಗರ್, ಬಿಪಿಯಲ್ಲಿ ವ್ಯತ್ಯಾಸ ಇರುವುದರಿಂದ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ'' ಎಂದು ತಿಳಿಸಿದ್ದಾರೆ. ಆದರೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.
ಶ್ರೀನಿವಾಸ್ ಪ್ರಸಾದ್ ಆರೋಗ್ಯದ ಕುರಿತು ಪುತ್ರಿ ಪ್ರತಿಮಾ ಪ್ರಸಾದ್ ಮಾಹಿತಿ ಹಂಚಿಕೊಂಡಿದ್ದು, ''ನಮ್ಮ ತಂದೆಯವರಿಗೆ ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಪರಿಣಿತ ವೈದ್ಯರ ತಂಡ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಮುಂದುವರೆಸುತ್ತಿದ್ದಾರೆ. ತಂದೆಯವರ ಅಭಿಮಾನಿಗಳು, ಹಿತೈಷಿಗಳು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಬೇಕಾಗಿ ವಿನಂತಿಸುತ್ತೇನೆ'' ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಶ್ರೀನಿವಾಸ್ ಪ್ರಸಾದ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ: ಹಲವು ವರ್ಷಗಳ ಬಳಿಕ ಪರಸ್ಪರ ಭೇಟಿ - Siddaramaiah Meets Srinivas Prasad