ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮುಡಾಗೆ ಸೇರಿದ 300 ಕೋಟಿ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಸತ್‌ನಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹೋರಾಡುತ್ತಿದೆ. ದಲಿತರು, ಬಡವರು, ಶೋಷಿತರ ಮೇಲೆ ಕೇಂದ್ರದ ಬಿಜೆಪಿ ಸರ್ಕಾರ ದಾಳಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದಕ್ಕೆ ಹೆದರಿ ಭಾರತ ಸರ್ಕಾರ, ಮೋದಿ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದರು.