ಬೆಂಗಳೂರು:ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ದೊರೆತಿದೆ. ಹಗರಣದಲ್ಲಿ ಸಿಎಂ ಪಾತ್ರವಿರುವ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಗುರುವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ-ರಿಪೋರ್ಟ್ ಸಲ್ಲಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. gಉರುವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿಯನ್ನ ಸಲ್ಲಿಸಲಿದ್ದಾರೆ.
ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಆಧಾರದ ಮೇರೆಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆಗಳು ಒಳಗೊಂಡಂತೆ ಭಾರತೀಯ ದಂಡ ಸಂಹಿತೆ (ಐಪಿಸಿ) ವಿವಿಧ ಸೆಕ್ಷನ್ ಗಳಡಿ ಕಳೆದ ವರ್ಷ ಸೆ.27ರಂದು ಮೈಸೂರು ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದರು. ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಉಳಿದ ಮೂವರನ್ನು ನಂತರದ ಆರೋಪಗಳೆಂದು ಪರಿಗಣಿಸಿ ವಿಚಾರಣೆ ನಡೆಸಿದ್ದರು.
ದೂರುದಾರಗೆ ಲೋಕಾಯುಕ್ತ ನೋಟಿಸ್ :ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ಬಹುತೇಕ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತರು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣವು ಸಿವಿಲ್ ಸ್ವರೂಪದ್ದಾಗಿದ್ದು, ತನಿಖೆ ನಡೆಸಲು ತಕ್ಕುದಲ್ಲ. ಕಾನೂನಿನ ತಪ್ಪು ತಿಳಿವಳಿಕೆ, ಕ್ರಮ ಜರುಗಿಸಲು ಸರಿಯಾದದ್ದು ಅಲ್ಲ. ಪ್ರಮುಖವಾಗಿ ಸಾಕ್ಷ್ಯಾಧಾರಗಳ ಕೊರತೆ ಕಂಡುಬಂದಿದೆ. ಇದರಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಬಗ್ಗೆ ಆಕ್ಷೇಪಣೆಗಳಿದ್ದರೆ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಬಹುದು ಎಂದು ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದಾರೆ.