ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಕುಟುಂಬ ಸದಸ್ಯರಿಗೆ ಬದಲಿ ನಿವೇಶನ ಹಂಚಿಕೆ ಹಗರಣ ಆರೋಪದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ನಿಗದಿಪಡಿಸಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನಡೆಸಿದರು.
ವಿಚಾರಣೆ ಆರಂಭವಾದ ಸಂದರ್ಭದಲ್ಲಿ ಜಮೀನಿನ ಮೂಲ ಮಾಲೀಕ ದೇವರಾಜು ಪರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದ ಸುಪ್ರೀಂ ಕೋರ್ಟ್ ಹಿರಿಯ ವಕೀಲ ದುಶ್ಯಂತ್ ದವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಎತ್ತಿ ಹಿಡಿದಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಡಿಸೆಂಬರ್ 5ಕ್ಕೆ ನಿಗದಿಯಾಗಿದೆ. ಈ ನಿಟ್ಟಿನಲ್ಲಿ ಸಿಬಿಐ ತನಿಖೆ ಕೋರಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 5ರ ನಂತರ ನಿಗದಿಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಈ ವೇಳೆ ದೂರುದಾರ/ಅರ್ಜಿದಾರ ಸ್ನೇಹಮಹಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್, ವಿಚಾರಣೆ ಮುಂದೂಡುವುದಕ್ಕೂ ಮುನ್ನ ತನಿಖೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಒಮ್ಮೆ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ದುಶ್ಯಂತ್ ದವೆ, ಇದು ಅನ್ಯಾಯದ ನಡೆ, ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪೀಠ, ಇಂದು ಅರ್ಜಿ ವಿಚಾರಣೆ ನಡೆಸುತ್ತಿಲ್ಲ. ಹೀಗಾಗಿ ದಾಖಲೆ ಪರಿಶೀಲನೆ ನಡೆಸುವ ಅಗತ್ಯವಿಲ್ಲ ಎಂದು ತಿಳಿಸಿ ವಿಚಾರಣೆಯನ್ನು ಡಿಸೆಂಬರ್ 10ರಂದು 2.30ಕ್ಕೆ ನಿಗದಿಪಡಿಸಿತು.
ಪ್ರಕರಣದ ಹಿನ್ನೆಲೆ: ಸಿಎಂ ಪತ್ನಿ ಬಿ.ಎಂ.ಪಾರ್ವತಿ ಮುಡಾದಿಂದ ಕೋಟ್ಯಂತರ ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈಗಾಗಲೇ ಪ್ರಕರಣದ ತನಿಖೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಆದರೆ, ಸಿದ್ದರಾಮಯ್ಯ ರಾಜ್ಯದ ಹಾಲಿ ಮುಖ್ಯಮಂತ್ರಿ ಆಗಿದ್ದು, ರಾಜ್ಯ ಸರ್ಕಾರದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತ್ತು.
ಇದನ್ನೂ ಓದಿ:ಮುಡಾ ಹಗರಣ: ಎಲ್ಲ ದಾಖಲೆಗಳನ್ನ ನ್ಯಾಯಾಲಯಕ್ಕೆ ನೀಡುತ್ತೇನೆ - ಸ್ನೇಹಮಯಿ ಕೃಷ್ಣ