ಮೈಸೂರು: ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದಂಪತಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ, ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.
ಚಾಮುಂಡೇಶ್ವರಿ ದರ್ಶನ ಪಡೆದ ಬಿ.ವೈ.ವಿಜಯೇಂದ್ರ (ETV Bharat) ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲುವುದಿಲ್ಲ:ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಇಂದು ಆರಂಭವಾಗಲಿರುವ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಪಾದಯಾತ್ರೆಗೆ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ" ಎಂದರು.
"ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಹಿಂದ ಹೆಸರು ಹೇಳಿ ಅಧಿಕಾರ ಹಿಡಿದ್ದಿದು, ಆದರೆ ಅಹಿಂದ ವರ್ಗಕ್ಕೆ ದ್ರೋಹ ಮಾಡಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಚಾರ ಮಿತಿ ಮೀರಿ ಹೋಗಿದ್ದು, ತುಳಿತಕ್ಕೆ ಒಳಗಾದ ವರ್ಗಕ್ಕೆ ನ್ಯಾಯ ಸಿಗಬೇಕು, ತಪಿತಸ್ಥರಿಗೆ ಶಿಕ್ಷೆಯಾಗಬೇಕು. ಇದರ ಜತೆಗೆ ಮುಡಾ ಹಗರಣ, ವಾಲ್ಮೀಕಿ ಹಗರಣ, ಹಾಗೂ ಎಸಿ/ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದೇವೆ" ಎಂದರು.
ಪಾದಯಾತ್ರೆ ಮೊಟಕು ಇಲ್ಲ: "ಹಲವು ವಿಚಾರಗಳನ್ನು ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, "ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಈ ರೀತಿ ಮಾತನಾಡುವುದು ಆಗುತ್ತದೆ. ಈ ಬಗ್ಗೆ ನಾನು ಮಾತನಾಡುವುದಿಲ್ಲ, ಪಾದಯಾತ್ರೆ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ನವರದು ಪಶ್ಚಾತ್ತಾಪದ ಯಾತ್ರೆಯಾಗಿದ್ದು, ಅವರು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಗಿಲ್ಲ ಎಂದು ಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ತಮ್ಮ ಭ್ರಷ್ಟಾಚಾರವನ್ನು ಸಮರ್ಥನೆ ಮಾಡಿಕೊಳ್ಳುವ ಮಟ್ಟಕ್ಕೆ ಕಾಂಗ್ರೆಸ್ ಇಳಿದಿದೆ" ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಬಿಜೆಪಿ-ಜೆಡಿಎಸ್ ಮೈಸೂರು ಪಾದಯಾತ್ರೆಯ ರೂಟ್ ಮ್ಯಾಪ್ ಸಿದ್ಧ - BJP JDS Mysuru Chalo