ಮೈಸೂರು:"ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು" ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು. ವಿವಿಯ ಶೈಕ್ಷಣಿಕ ಮಂಡಳಿಯ ಸಭಾಂಗಣದಲ್ಲಿ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, "ಈ ಬಾರಿಯ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ನಾಡೋಜ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್.ಸೀತಾರಾಮ್ ಅವರಿಗೆ ನೀಡಲಾಗುತ್ತದೆ" ಎಂದು ಮಾಹಿತಿ ನೀಡಿದರು.
"ಪದ್ಮವಿಭೂಷಣ ಪುರಸ್ಕೃತರೂ ಆಗಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ರಾಜಕೀಯ ಕ್ಷೇತ್ರ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕರ್ನಾಟಕದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇದನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು. ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಹಾಗೂ ನಾಡೋಜ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು ಮೈಸೂರಿನ ಪ್ರಸಿದ್ಧ ಸರ್ಕಾರಿ ಮಹಾರಾಜ ಸಂಸ್ಕೃತ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ವೇದಾಂತ ಪಾಂಡಿತ್ಯಕ್ಕೆ ರಾಷ್ಟ್ರಪತಿಗಳಿಂದ ಚಿನ್ನದ ಪದಕ ಪಡೆದಿದ್ದಾರೆ. ಹೀಗಾಗಿ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ" ಎಂದು ತಿಳಿಸಿದರು.
"ಎಂ.ಆರ್.ಸೀತಾರಾಮ್ ಅವರು ಬೆಂಗಳೂರಿನಲ್ಲಿ ಗೋಕುಲ ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಿ ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯದ ಪ್ರವರ್ತಕರಲ್ಲಿ ಒಬ್ಬರಾದ ದಿವಂಗತ ಡಾ.ಎಂ.ಎಸ್.ರಾಮಯ್ಯನವರ ಮಗ. ಸೀತಾರಾಮ್ ರಾಜಕಾರಣಿಯಾಗಿ, ಉದ್ಯಮಿಯಾಗಿ, ಶಿಕ್ಷಣ ತಜ್ಞರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸೇವೆಯನ್ನು ಗುರುತಿಸಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ" ಎಂದು ಹೇಳಿದರು.