ಬೆಂಗಳೂರು :ರಾಜ್ಯ ಸರ್ಕಾರದ ಸುತ್ತೋಲೆಯಲ್ಲಾದ ಸಣ್ಣ ತಪ್ಪು ವಿವಾದಕ್ಕೆ ಕಾರಣವಾಗಿ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಈ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ, ಪರಿಷ್ಕೃತ ಆದೇಶ ಹೊರಡಿಸುವ ಭರವಸೆಯ ನೀಡುವುದರ ಜೊತೆಗೆ ಆದೇಶದಲ್ಲಿ ಲೋಪ ಎಸಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸದನದ ಒಳಗೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಸ್ಪಷ್ಟನೆ ನೀಡಿದರು.
ಇದನ್ನು ಕಂಡ ಸಚಿವರು ಸುತ್ತೋಲೆ ತಿದ್ದುಪಡಿ ಮಾಡಿ, ಹೊಸ ಆದೇಶ ಹೊರಡಿಸಿದ್ದಾರೆ. ಇದೀಗ ಗೊಂದಲ ನಿವಾರಣೆ ಆಗಿದೆ. ಈ ಸುತ್ತೋಲೆ ತಪ್ಪಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಪ್ರತಿಪಕ್ಷದ ಸದಸ್ಯರು ಪ್ರಸ್ತಾಪಿಸಿ, ರಾಷ್ಟ್ರ ಕವಿ, ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪು ಅವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಾಗೂ ಅದಕ್ಕೆ ಫೆಬ್ರವರಿ 16 ರಂದು ಮಾಡಲಾದ ತಿದ್ದುಪಡಿ ಪ್ರಕಾರ, ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.