ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಕರ್ನಾಟಕ ಬಜೆಟ್-2024 ರಲ್ಲಿ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇಂದಿನ ಬಜೆಟ್ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ವಿವರ ಇಲ್ಲಿದೆ.
ಕರ್ನಾಟಕ ರೈತ ಸಮೃದ್ಧಿ ಯೋಜನೆ: ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸುವವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.
ನಮ್ಮ ಮಿಲ್ಲೆಟ್ ಯೋಜನೆ: ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.
ಕಿಸಾನ್ ಮಾಲ್ಗಳ ಸ್ಥಾಪನೆ: ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು.
ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ: ರಾಜ್ಯದಲ್ಲಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
ಸ್ಪೈಸ್ ಪಾರ್ಕ್ ಸ್ಥಾಪನೆ: ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆ ಯೋಜನೆ:ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್ಜಿ ಪ್ಲಾಂಟ್ ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.
ಸೋಲಾರ್ ಪಾರ್ಕ್ಗಳ ಸ್ಥಾಪನೆ:ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್ಗಳನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
ಗಣಿತ ಗಣಕ ಕಾರ್ಯಕ್ರಮ: 3 ರಿಂದ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು ಜೆ-ಪಾಲ್ ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ನಾವು-ಮನುಜರು ಸಂವಾದ ಕಾರ್ಯಕ್ರಮ:ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ಕಾಲ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
ಡೇ-ಕೇರ್ ಕಿಮೋಥೆರಪಿ ಕೇಂದ್ರಗಳ ಸ್ಥಾಪನೆ: ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ ಸರ್ಕಾರವು 20 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸಲಾಗುವುದು.
ಹೆಲ್ತ್ ರಿಪಾಸಿಟರಿ ಆರಂಭ: ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು ಹೆಲ್ತ್ ರಿಪಾಸಿಟರಿಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.