ಬೆಂಗಳೂರು:ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 17ರಂದು ಸಂಜೆ 4 ಗಂಟೆಗೆ ಕಲಬುರಗಿ ಮಿನಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ, ಸಂಜೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ವಿಷಯಗಳನ್ನು ಆ ಸಚಿವ ಸಂಪುಟ ಸಭೆಯಲ್ಲಿ ಪರಿಗಣಿಸಲಾಗುತ್ತಿದೆ.
ಕಲಬುರಗಿಯಲ್ಲಿ ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಇದೀಗ 10 ವರ್ಷಗಳ ಬಳಿಕ ಅವರ ನೇತೃತ್ವದಲ್ಲೇ ಮತ್ತೆ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಆ ಮೂಲಕ ಕಲ್ಯಾಣ ಕರ್ನಾಟಕ ಕೇಂದ್ರೀಕೃತವಾಗಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರಿಗೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.