ಬೆಂಗಳೂರು : ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ನ್ಯಾಯಾಲಯ, ಈ ವಾರೆಂಟ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ಪ್ರಕರಣ ಕುರಿತಂತೆ ಈವರೆಗೂ ಹಲವು ಬಾರಿ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಗೈರು ಹಾಜರಾಗಿದ್ದರು. ಹೀಗಾಗಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿಸಿದ್ದು, ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದೆ.
ಪ್ರಕರಣದವೇನು?:ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭದಲ್ಲಿ ಬಿಬಿಎಂಪಿ ಆಸ್ತಿಗಳ ಉಳಿಸುವ ಕುರಿತಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕೊರೊನಾ ನಿಯಮಗಳನ್ನು ಉಲ್ಲಂಘನೆ ಆರೋಪದಲ್ಲಿ ವಿಪತ್ತು ನಿರ್ವಹಣಾ ಕಾಯಿದೆಯಡಿ ನಗರದ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಆರೋಪ ರಾಮಲಿಂಗಾರೆಡ್ಡಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಸಂಬಂಧ ಸಮನ್ಸ್ ಜಾರಿಯಾಗಿದ್ದರೂ ರಾಮಲಿಂಗಾರೆಡ್ಡಿ ಹಾಜರಾಗಿರಲಿಲ್ಲ. ಆದ ಕಾರಣ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದಲ್ಲಿ ವಿಪತ್ತು ನಿರ್ವಹಣಾ ಕಾಯಿದೆ ಸೆಕ್ಷನ್ 51 (ಬಿ) ಮತ್ತು ಐಪಿಸಿ ಸೆಕ್ಷನ್ 188 ಅಡಿ ಎಫ್ಐಆರ್ ದಾಖಲಿಸಲಾಗಿತ್ತು. ಡಿ ಕೆ ಶಿವಕುಮಾರ್, ಬಿ ಕೆ ಹರಿಪ್ರಸಾದ್, ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಧ್ಯಕ್ಷ ಜಿ ಶೇಖರ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್, ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಧ್ಯಕ್ಷ ಜಿ ಕೃಷ್ಣಪ್ಪ ಅವರ ವಿರುದ್ದದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಈಗಾಗಲೇ ವಜಾ ಮಾಡಿದೆ. ಉಳಿದವರ ವಿರುದ್ಧದ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ಇದನ್ನೂ ಓದಿ:ನಾನು ಸುರೇಶ್ರನ್ನು ಗುಂಡಿಕ್ಕಿ ಕೊಲ್ಲಿ ಎಂದು ಎಲ್ಲೂ ಹೇಳಿಲ್ಲ, ಪೊಲೀಸರ ನೋಟಿಸ್ಗೆ ಹೆದರಲ್ಲ: ಈಶ್ವರಪ್ಪ