ಬೆಂಗಳೂರು: ನಗರದ ಮಲ್ಲತ್ತಹಳ್ಳಿ ಕೆರೆಯ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ ನ್ಯಾಯಾಲಯದ ಆದೇಶವಿತ್ತು. ಅದಾಗ್ಯೂ, ಹೈಕೋರ್ಟ್ ಆದೇಶ ಉಲ್ಲಂಘಿಸಿ ಮಾಗಡಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯು, ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ. ಆರ್. ಮೋಹನ್, ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣ ಚಟುವಟಿಕೆ ಕುರಿತಂತೆ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ರಸ್ತೆ ಸೇರಿದಂತೆ ಯಾವುದೇ ಶಾಶ್ವತ ಅಥವಾ ತಾತ್ಕಾಲಿಕ ನಿರ್ಮಾಣ ಕೆಲಸ ಕೈಗೊಳ್ಳಬಾರದು. ಗಣೇಶ ನಿಮಜ್ಜನ ಸೇರಿದಂತೆ ಯಾವುದೇ ರೀತಿಯ ಉತ್ಸವಗಳಿಗೆ ಅವಕಾಶ ನೀಡಬಾರದು ಎಂದು 2023 ರ ಮಾರ್ಚ್14 ರಂದು ಬಿಬಿಎಂಪಿಗೆ ಆದೇಶ ನೀಡಿದೆ. ಆದರೂ, ಈ ಆದೇಶವನ್ನು ಉಲ್ಲಂಘಿಸಿ 80 ಅಡಿ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಫೋಟೋ ಹಾಗೂ ದಾಖಲೆಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.