ನವದೆಹಲಿ:ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಯುವಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ಆರೋಪಿ ರಿಯಾಜ್ ಯೂಸೂಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 19ಕ್ಕೆ ತಲುಪಿದೆ.
ಜುಲೈ 2022ರಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರಾದ ಇಬ್ಬರು ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದರು.