ಹುಬ್ಬಳ್ಳಿ: ಇಲ್ಲಿನ ಉಣಕಲ್ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪಸ್ವಾಮಿ ಮಾಲಾಧಾರಿ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಇದರಿಂದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೇಜಶ್ವರ ಸಾತರೆ (26) ಎಂಬುವರೇ ಸಾವನ್ನಪ್ಪಿದ ಮಾಲಾಧಾರಿಯಾಗಿದ್ದಾರೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಒಟ್ಟು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಪೈಕಿ 6 ಮಂದಿ ಮಾಲಾಧಾರಿಗಳು ಈಗಾಗಲೇ ಸಾವನ್ನಪ್ಪಿದ್ದರು. ತೇಜಶ್ವರ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದಕ್ಕೂ ಮುನ್ನ, ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಹಾಗೂ ಮಂಜುನಾಥ ವಾಗ್ಮೋಡೆ (22) ಡಿ.29ರಂದು ಮೃತಪಟ್ಟಿದ್ದರು.
ಪ್ರಕರಣದ ಹಿನ್ನೆಲೆ:ಡಿಸೆಂಬರ್ 23ರಂದು ಬೆಳಗಿನ ಜಾವ ಹುಬ್ಬಳ್ಳಿಯ ಉಣಕಲ್ ಅಚ್ಚವ್ವ ಕಾಲೊನಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿತ್ತು. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.