ಬೆಂಗಳೂರು:ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ವಿವಾದ ಸೃಷ್ಟಿಸುತ್ತಿದೆ ಎಂದು ಮೂವರು ಸಚಿವರು ತಿಳಿಸಿದರು.
ವಿಜಯಪುರ ಜಿಲ್ಲೆಯಲ್ಲಿ ಈ ಸಂಬಂಧ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ಇಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿಯದಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ. 137 ಎಕರೆಯನ್ನು ವಿವಿಧ ಯೋಜನೆಗಳಿಗೆ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಮಿಕ್ಕ 773 ಎಕರೆ ಮಾತ್ರ ವಕ್ಫ್ ಸಂಸ್ಥೆಗಳ ಅಡಿಯಲ್ಲಿದೆ. ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರಿಗೆ ವಕ್ಫ್ ಆಸ್ತಿಯೆಂದು ಯಾವುದೇ ನೋಟಿಸ್ ನೀಡಿಲ್ಲ. ಈ ಸಂಬಂಧ ಸಚಿವ ಎಂ.ಬಿ.ಪಾಟೀಲ ಅವರೂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.
1974ರ ಗೆಜೆಟ್ ಅಧಿಸೂಚನೆಯಲ್ಲಿ ವಿಜಯಪುರದ ಮಹಾಲಬಾಗಾಯತದ ಪಕ್ಕದಲ್ಲಿ ಬ್ರ್ಯಾಕೆಟ್ ಒಳಗೆ ವಕ್ಫ್ ಆಸ್ತಿಯಡಿಯಲ್ಲಿ ಹೊನವಾಡ ಎಂದು ತಪ್ಪಾಗಿ ನಮೂದಿಸಲಾಗಿತ್ತು. 1977ರಲ್ಲಿ ವಕ್ಫ್ ಮಂಡಳಿಯೇ ತನ್ನ ತಪ್ಪನ್ನು ಸರಿಪಡಿಸಿದೆ. ಇದು ವಿವಾದವೇ ಅಲ್ಲ. ಬಿಜೆಪಿಯಲ್ಲಿ ವಿಜಯೇಂದ್ರ ಮತ್ತು ಬಸವರಾಜ ಪಾಟೀಲ ಯತ್ನಾಳ್ ನಡುವೆ ನಡೆಯುತ್ತಿರುವ ತಿಕ್ಕಾಟದಿಂದ ಇದು ರಾಜಕೀಯ ಬಣ್ಣ ಪಡೆದುಕೊಂಡಿದೆ ಎಂದು ಹೇಳಿದರು.
ಇಂಡಿ ತಾಲೂಕಿನಲ್ಲಿ ಮಾತ್ರ ಅಲ್ಲಿಯ ತಹಸೀಲ್ದಾರರು ಯಾವುದೇ ನೋಟಿಸ್ ನೀಡದೆ, 41 ಆಸ್ತಿಗಳನ್ನು ಇಂದೀಕರಣ(ಪಹಣಿ/ಆರ್ಟಿಸಿ) ಮಾಡಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತರು 1974ಕ್ಕಿಂತ ಮೊದಲಿನ ದಾಖಲೆ ಕೊಟ್ಟರೆ ಅಂತಹ ಆಸ್ತಿಗಳನ್ನು ವಕ್ಫ್ ಅಧಿಸೂಚನೆಯಿಂದ ಕೈಬಿಡಲಾಗುವುದು. ಬಾಧಿತ ರೈತರು ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೆ, ಅವರು ಪರಿಶೀಲಿಸಿ, ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.