ಬೆಂಗಳೂರು: ''ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ನಡೆದ ಘಟನೆಯ ಬಗ್ಗೆ ಆರೋಪಿಗಳ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ'' ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿ, ''ಮೈಸೂರಿನಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿದಿದೆ. ನಿಷ್ಠಾವಂತ ಅಧಿಕಾರಿಗಳು ಹಾಗೂ ಪೊಲೀಸರಿಗೆ ರಕ್ಷಣೆ ನೀಡಿ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ'' ಎಂದು ತಿಳಿಸಿದರು.
ಬೀದಿಗಿಳಿದು ಹೋರಾಟ ಮಾಡಿ : ''ನಿಷ್ಠಾವಂತ ಅಧಿಕಾರಿಗಳನ್ನು ಕಾಪಾಡಬೇಕಾದ ವಿಧಾನಸೌಧ ಮೌನ ಸೌಧವಾಗಿದೆ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಬರೆಸಿದ್ದಾರೆ. ಕಾಂಗ್ರೆಸ್‌ನಿಂದಾಗಿ ಇದು ದೆವ್ವಗಳ ಕೆಲಸ ಎಂಬಂತಾಗಿದೆ. ಭದ್ರಾವತಿಯಲ್ಲಿ ಮರಳು ಮಾಫಿಯಾ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಲಾಗಿದೆ. ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿರುವುದರಿಂದ ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿಕೆ ನೀಡುವ ಬದಲು ಬೀದಿಗಿಳಿದು ಹೋರಾಟ ಮಾಡಬೇಕು'' ಎಂದು ಆಗ್ರಹಿಸಿದರು.