ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ - karnataka rain alert - KARNATAKA RAIN ALERT

ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಉಡುಪಿ, ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಮಳೆ
ಸಂಗ್ರಹ ಚಿತ್ರ (ETV Bharat)

By ETV Bharat Karnataka Team

Published : Aug 24, 2024, 5:48 PM IST

ಬೆಂಗಳೂರು:ರಾಜ್ಯದಲ್ಲಿಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗೆ ಇಂದು ಸಂಜೆಯಿಂದ ನಾಳೆ ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಅಲ್ಲಿನ ಬಹುತೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಇರಲಿದ್ದು, ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುಸ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಮತ್ತು ರಾಯಚೂರು, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.

ಗಾಳಿಯ ವೇಗ ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ವರೆಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಹೇಳಿದೆ.

ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಸಾಧಾರಣ ಮಳೆಯಾಗಲಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದಿದೆ.

ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್. ಪುವಿಯರಸನ್ ಮಾತನಾಡಿ, "ಕಡಲಾಚೆಯ ಟ್ರಫ್ ದಕ್ಷಿಣ ಗುಜರಾತ್‌ನಿಂದ ದಕ್ಷಿಣ ಕೇರಳ ತೀರದವರೆಗೆ ಹಾದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಮೇಲೆ ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿದೆ. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ನಿನ್ನೆಯಿಂದ ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ. ಅತಿ ಹೆಚ್ಚು ಮಳೆ 13 ಸೆಂ.ಮೀ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್​ನಲ್ಲಿ ದಾಖಲಾಗಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 11, ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 7 ಸೆಂ.ಮೀ ಮಳೆ ಬಿದ್ದಿದೆ" ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ರೈತರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ - Minimum Support Price

ABOUT THE AUTHOR

...view details