ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳಿಗೆ ಅನ್ವಯವಾಗುವಂತೆ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡಕ್ಕೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಕೂಡ ಆರೆಂಜ್ ಅಲರ್ಟ್ ನೀಡಲಾಗಿದೆ.
ದಾವಣಗೆರೆ ಜಿಲ್ಲೆಗೆ ಇಂದು, ಮೈಸೂರು ಜಿಲ್ಲೆಗೆ ನಾಳೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಗೆ ಜೂನ್ 25 ಮತ್ತು 26 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳ ಹಲವೆಡೆ ಮಳೆಯಾಗುವ ಲಕ್ಷಣಗಳಿವೆ.
ಮೀನುಗಾರರಿಗೆ ಎಚ್ಚರಿಕೆ: ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವಿರಲಿದ್ದು, 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ರಾಜ್ಯಕ್ಕೆ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಬಿರುಗಾಳಿ ಪ್ರಭಾವ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.
ಎಲ್ಲೆಲ್ಲಿ ಅತಿ ಹೆಚ್ಚು ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಮಣಿಯಲ್ಲಿ ಅತಿ ಹೆಚ್ಚು 10 ಸೆ.ಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣ ಮತ್ತು ಧರ್ಮಸ್ಥಳದಲ್ಲಿ ಕ್ರಮವಾಗಿ 9 ಮತ್ತು 7, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 7, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮತ್ತು ಪುತ್ತೂರಿನಲ್ಲಿ 6, ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 6 ಸೆ.ಮೀ ಮಳೆಯಾಗಿದೆ.
ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಎನ್.ಪುವಿಯರಸನ್ ಪ್ರತಿಕ್ರಿಯಿಸಿ, ನೈಋತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಹಾರಾಷ್ಟ್ರ- ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಲ್ಲಿ ಟ್ರಫ್ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‍ಲೈನ್ ಬುಕ್ಕಿಂಗ್, ತತ್ಕಾಲ್ ವ್ಯವಸ್ಥೆ; ಟಿಕೆಟ್ ಬುಕ್ ಮಾಡುವುದು ಹೇಗೆ? - Online Booking