ಬೆಂಗಳೂರು: ಕಳೆದ ವರ್ಷ ಅನಾವೃಷ್ಟಿ ಅನುಭವಿಸಿದ್ದ ರಾಜ್ಯದ ಜನತೆಗೆ ಈ ಬಾರಿ ಅತಿವೃಷ್ಟಿ ಕಾಡುತ್ತಿದೆ. ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿನ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಇಂದಿನಿಂದ ನಾಳೆ (ಜು. 22) ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ 24 ಗಂಟೆಗಳ ಕಾಲ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಬೀದರ್ ಮತ್ತು ದಕ್ಷಿಣ ಒಳನಾಡಿನ ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ.ವರೆಗೆ ತಲುಪುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ. ಇರಲಿದ್ದು, ಅಲ್ಲಿ ಭಾರೀ ಮಳೆ ಸುರಿಯಲಿದೆ. ಬೆಳಗಾವಿ, ಬೀದರ್, ಕಲಬುರಗಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಮತ್ತು ನಿರಂತರ ಗಾಳಿ ಬೀಸಲಿದೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿಯೂ ಅನೇಕ ಕಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.