ಬೆಂಗಳೂರು:ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆಯಾಗಿತ್ತು. ಈ ತಿಂಗಳು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಾತ್ರ ವಾಡಿಕೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆದರೆ ಮುಂಗಾರು ಮಳೆ ಚೇತರಿಕೆ ಕಂಡು ಕಳೆದ ನಾಲ್ಕೈದು ದಿನಗಳಿಂದ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ.
ಕೆಲವೆಡೆ ಮಳೆಯ ತೀವ್ರ ಕೊರತೆಯಾಗಿ ಮತ್ತೆ ಬರದ ಛಾಯೆ ಆವರಿಸುವ ಆತಂಕ ಎದುರಾಗಿತ್ತು. ಈ ಮಧ್ಯೆ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಈಗ ಮುಂಗಾರು ಮತ್ತೆ ಚುರುಕಾಗಿದೆ. ಆದ್ದರಿಂದ ಇನ್ನೂ ಒಂದೆರಡು ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಆದ್ದರಿಂದ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.