ಮೈಸೂರು:ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸಿ ಉತ್ತಮ ಆರೋಗ್ಯ ಸೇವೆ ನೀಡುವುದು ಹಾಗೂ ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ವಿಶ್ವ ಸಿಕಲ್ ಸೆಲ್ ಅನೀಮಿಯಾ ನಿರ್ಮೂಲನಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಹಯೋಗದಲ್ಲಿ ರೂಪಿಸಿರುವ ಪ್ರಾಜೆಕ್ಟ್ ಚಂದನ ಯೋಜನೆಯನ್ನು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 2 ವರ್ಷಗಳ ಅವಧಿಗೆ ಜಾರಿಗೊಳಿಸಲಾಗುತ್ತಿದೆ. ಸಿಕಲ್ ಸೆಲ್ ಅನೀಮಿಯಾ ರೋಗ ಪತ್ತೆ, ಜಾಗೃತಿ ಹಾಗೂ ಚಿಕಿತ್ಸೆ ನೀಡುವುದು ನಮ್ಮ ಗುರಿಯಾಗಿದೆ. ಸರಳವಾಗಿ ಸಿಕಲ್ ಸೆಲ್ ಅನಿಮಿಯಾ ಕಂಡುಹಿಡಿಯುವ ಸಾಧನವನ್ನು ಭಾರತೀಯ ವಿಜ್ಞಾನ ಸಂಸ್ಥೆಯ ಯುವ ವಿಜ್ಞಾನಿಗಳು ಅಭಿವೃದ್ದಿಪಡಿಸಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ಈ ಸಾಧನಗಳನ್ನು ಕೊಡುಗೆಯಾಗಿ ನೀಡುತ್ತಿದೆ ಎಂದರು.
7 ಜಿಲ್ಲೆಗಳಲ್ಲಿ ಸಿಕಲ್ ಸೆಲ್ ಅನೀಮಿಯಾ ಪರೀಕ್ಷೆ ಮಾಡಿದ್ದು ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಾಯಿಲೆ ಕಂಡುಬಂದಿದೆ. ಸಿಕಲ್ ಸೆಲ್ ಅನೀಮಿಯಾ ಆನುವಂಶೀಯ ಕಾಯಿಲೆಯಾಗಿದ್ದು, ಕಾಯಿಲೆ ಇರುವವರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.