ಬೆಂಗಳೂರು :ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರ ಬಯಸುತ್ತದೆ. ಆದರೆ, ಹಿಂಸಾತ್ಮಕ ಚಟುವಟಿಕೆಗಳಲ್ಲಿ ಯಾರೇ ತೊಡಗಿದರೂ ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯೂ ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದಿದ್ದಾರೆ.
ಆದರೆ, ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ. ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.
ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ. ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೆ ಕೂರುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.