ದಾವಣಗೆರೆ:ಇತ್ತೀಚೆಗೆ ನಡೆದ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು ಪ್ರಕರಣ ಖಂಡಿಸಿ ಆಕ್ರೋಶಗೊಂಡ ಜನರು ಚನ್ನಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು. ಆಗ ಕೆಲವು ಕಿಡಿಗೇಡಿಗಳು 'ಪಾಕಿಸ್ತಾನ್ ಜಿಂದಾಬಾದ್' ಎಂದು ಕೂಗಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
''ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯ ಮುಂದೆ ನಡೆದ ಪ್ರತಿಭಟನೆಯ ವೇಳೆ ಕೆಲವು ಯುವಕರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಬಗ್ಗೆ ಪೊಲೀಸರು ಪರಿಶೀಲಿಸಿದ್ದು, ಮೇಲ್ನೋಟಕ್ಕೆ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವುದು ವಿಡಿಯೋದಲ್ಲಿ ಕಂಡುಬಂದಿಲ್ಲ'' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.