ಕರ್ನಾಟಕ

karnataka

ETV Bharat / state

ಪಂಚಮಸಾಲಿ‌ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ಬೆಳಗಾವಿ ಜಿಲ್ಲಾಧಿಕಾರಿ ಹೇಳಿದ್ದೇನು? - PANCHAMASALI RESERVATION

ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮತ್ತು ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾಹಿತಿ ನೀಡಿದರು.

ಪಂಚಮಸಾಲಿ‌ ಹೋರಾಟಗಾರರ ಮೇಲೆ ಲಾಠಿ ಚಾರ್ಜ್
ಬೆಳಗಾವಿ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ (ETV Bharat)

By ETV Bharat Karnataka Team

Published : Dec 10, 2024, 10:51 PM IST

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರದಲ್ಲಿ ಹೈಕೋರ್ಟ್ ಆದೇಶವನ್ನು ಜಿಲ್ಲಾಡಳಿತ ಚಾಚೂ ತಪ್ಪದೇ ಪಾಲಿಸಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು.

ಬೆಳಗಾವಿ ಸುವರ್ಣಸೌಧದ ಸಮೀಪ ಕೊಂಡಸಕೊಪ್ಪ ಬಳಿ ಇಂದು 2ಎ ಮೀಸಲಾತಿಗೆ ಆಗ್ರಹಿಸಿ ನಡೆದ ಪಂಚಮಸಾಲಿ‌ ಸಮುದಾಯದ ಪ್ರತಿಭಟನೆಯಲ್ಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತುರ್ತು ಸುದ್ದಿಗೋಷ್ಠಿ ನಡೆಸಿದರು.

ಬೆಳಗಾವಿ ಜಿಲ್ಲಾಧಿಕಾರಿ (ETV Bharat)

ಸ್ವಾಮೀಜಿ ಅವರ ಜೊತೆಗೆ ನಾನು, ಪೊಲೀಸ್ ಕಮಿಷನರ್, ಎಸ್ಪಿ ಅವರು ಸುದೀರ್ಘವಾಗಿ ಚರ್ಚಿಸಿದ್ದೆವು. ಬೇರೆ ಜಾಗದಲ್ಲಿ ಪ್ರತಿಭಟನೆ ಮಾಡುವಂತೆ ತಿಳಿಸಿದ್ದೆವು. ಆದರೆ, ಅವರು ಕೊಂಡಸಕೊಪ್ಪದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದರು. ಹಾಗಾಗಿ, ಅಲ್ಲಿ ಪ್ರತಿಭಟನೆಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದೆವು. ಚಳಿಗಾಲದ ಅಧಿವೇಶನ ವೇಳೆ ಪ್ರತಿಭಟನೆ ನಡೆಸಬಹುದು. ಆದರೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾರಿಗೂ ತೊಂದರೆ ಆಗಬಾರದು. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎನ್ನುವ ಕಾನೂನಿದೆ. ಹಾಗಾಗಿ, ಹೈಕೋರ್ಟ್ ಆದೇಶ ಮೀರಿ ಜಿಲ್ಲಾಡಳಿತ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಮರ್ಥಿಸಿಕೊಂಡರು.

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗೆ ಇಳಿಯದಂತೆ ಪಂಚಮಸಾಲಿ ಹೋರಾಟಗಾರರಿಗೆ ನಾವು ಬಹಳಷ್ಟು ಮನವಿ‌ ಮಾಡಿದ್ದೆವು. ಆದರೂ ನಮ್ಮ‌ ಮಾತು ಅವರು ಕೇಳಲಿಲ್ಲ. ಅಲ್ಲದೇ ನಮ್ಮ‌ ಪೊಲೀಸರ ಮೇಲೆ ಕಲ್ಲು, ಚಪ್ಪಲಿ‌ ತೂರಿದರು. ಆಗ ನಮ್ಮ‌ ಪೊಲೀಸರು ಹೋರಾಟಗಾರರ ಮೇಲೆ ಕನಿಷ್ಠ ಬಲ ಪ್ರಯೋಗ ಮಾಡುವ ಅನಿವಾರ್ಯತೆ ಸೃಷ್ಟಿಯಾಯಿತು. ಆದರೂ ಘಟನೆಯಲ್ಲಿ‌ ನಮ್ಮ 14 ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಪಂಚಮಸಾಲಿ ಸಮಾಜದ 10 ಜನರಿಗೆ ಗಾಯವಾಗಿದೆ. ಅವರಿಗೆ ಜಿಲ್ಲಾಡಳಿತದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. 7 ಕೆಎಸ್​​ಆರ್​ಟಿಸಿ ಬಸ್, ಎರಡು ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ ಎಂದು ವಿವರಿಸಿದರು.

ಅದೇ ರೀತಿ ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 70 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ ಎಂದು ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ‌ ಉತ್ತರ ವಲಯ ಐಜಿಪಿ ವಿಕಾಶಕುಮಾರ ವಿಕಾಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಇದ್ದರು.

2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಸಮಾವೇಶ ನಡೆಸಿದ್ದ ಪಂಚಮಸಾಲಿಗರು ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವಂತೆ ಆಗ್ರಹಿಸಿದ್ದರು. ಮಧ್ಯಾಹ್ನದ ಬಳಿಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ಪರಿಸ್ಥಿತಿ ನಿಯಂತ್ರಣ ಕಳೆದುಕೊಂಡಿತ್ತು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್, ಬೆಲ್ಲದ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ: ಪೊಲೀಸರಿಂದ ಲಾಠಿ ಪ್ರಹಾರ, ಹಲವರಿಗೆ ಗಾಯ; ಸ್ವಾಮೀಜಿ, ಯತ್ನಾಳ್ ವಶಕ್ಕೆ

ABOUT THE AUTHOR

...view details