ಬೆಂಗಳೂರು: ''ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಇಲಾಖಾವಾರು ಪರಿಶೀಲನೆ ನಡೆಸಲಾಗಿದೆ'' ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಇದು ಮೊದಲ ಸಭೆಯಾಗಿರುವುದರಿಂದ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಎಲ್ಲ ಪ್ರಕರಣಗಳನ್ನು ಪರಿಶೀಲಿಸಿದ್ದೇವೆ. ಹೊಸದಾಗಿ ತನಿಖೆ ಆಗಬೇಕಿರುವುದನ್ನು ಗಮನಿಸಿದ್ದೇವೆ. ಎರಡು ತಿಂಗಳೊಳಗೆ ಪೂರ್ಣಗೊಳಿಸಿ, ಸಚಿವ ಸಂಪುಟಕ್ಕೆ ವರದಿ ಸಲ್ಲಿಸುತ್ತೇವೆ'' ಎಂದರು.
ನನ್ನ ಸಾಮರ್ಥ್ಯ ರಾಜ್ಯದ ಜನತೆಗೆ ಗೊತ್ತಿದೆ: ''ಪ್ರತಿಪಕ್ಷಗಳ ನಾಯಕರ ಹೇಳಿಕೆಗಳಿಗೆ ನಾನು ಏನನ್ನು ಹೇಳಲು ಹೋಗುವುದಿಲ್ಲ. ಅವರು ಏನೇ ಹೇಳಿದರೂ ಕೆರಳುವುದಿಲ್ಲ. ಸರ್ಕಾರದಲ್ಲಿ ನನಗೆ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿರಬೇಕು. ಆ ಕೆಲಸವನ್ನು ಮಾಡುತ್ತಿದ್ದೇನೆ. ನನಗೆ ಇದೆಲ್ಲ ಹೊಸತೇನಲ್ಲ. ಮೂರು ಬಾರಿ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ನನ್ನ ಸಾಮರ್ಥ್ಯ ರಾಜ್ಯದ ಜನತೆಗೆ ಗೊತ್ತಿದೆ. ನಾನು ಯಾವ ಇಲಾಖೆಯನ್ನು ನಿಭಾಯಿಸಿದ್ದೇನೆ, ಎಲ್ಲ ಸಂದರ್ಭದಲ್ಲಿ ಕೂಡ ನನ್ನ ಸಾಮರ್ಥ್ಯ ಆಯಾ ಇಲಾಖೆಯವರಿಗೆ ಗೊತ್ತಾಗಿದೆ'' ಎಂದು ಹೇಳಿದರು.