ಕರ್ನಾಟಕ

karnataka

ETV Bharat / state

ನನ್ನ ರಕ್ಷಣೆ, ನೆಮ್ಮದಿಗಾಗಿ ಹೋಮ ಮಾಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ - DK SHIVAKUMAR

ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ದರ್ಶನ ಪಡೆದರು. ನನ್ನ ನೆಮ್ಮದಿ, ರಕ್ಷಣೆಗಾಗಿ ಹೋಮ ಮಾಡಿಸಿದ್ದೇನೆ ಎಂದು ಇದೇ ವೇಳೆ ಪ್ರತಿಕ್ರಿಯೆ ನೀಡಿದರು.

Etv Bharat
Etv Bharat (Etv Bharat)

By ETV Bharat Karnataka Team

Published : Jan 10, 2025, 7:47 PM IST

ಬೆಂಗಳೂರು: ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ‌‌.ಶಿವಕುಮಾರ್ ತಿಳಿಸಿದ್ದಾರೆ.

ವೈಕುಂಠ ಏಕಾದಶಿ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಅವರು ಪ್ರತಿಕ್ರಿಯೆ ನೀಡಿದರು. ಗುರುವಾರ ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಮಾತನಾಡಿದ ಡಿಸಿಎಂ, ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿ ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಪ್ರತಿಕ್ರಿಯಿಸುತ್ತಾ, ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.

ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ ಎಂದು ಹೇಳಿದರು.

ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆಯ ಕಾರ್ಯಕ್ರಮ (ETV Bharat)

ವೆಂಕಟೇಶ್ವರನ ಜೊತೆ ಲಕ್ಷ್ಮೀ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮ ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ನಾಳೆ ಶೃಂಗೇರಿ ಮಠಕ್ಕೆ ಡಿಕೆಶಿ ಭೇಟಿ:ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಶೃಂಗೇರಿಗೆ ಭೇಟಿ ನೀಡಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭಾರತೀ ತೀರ್ಥ ಮಹಾ ಜಗದ್ಗುರುಗಳ ಸನ್ಯಾಸತ್ವ ಸ್ವೀಕರಿಸಿ 50 ವರ್ಷ ತುಂಬಿದ ಹಿನ್ನೆಲೆ, ಮಠದಲ್ಲಿ‌ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆಯ ಕಾರ್ಯಕ್ರಮ ನಡೆಯಲಿದೆ. ಏಕಕಾಲದಲ್ಲಿ 50,000 ವಿದ್ಯಾರ್ಥಿಗಳಿಂದ ಸ್ತೋತ್ರಪಟನೆ ಮೊಳಗಲಿದೆ. ಬೃಹತ್ ವೇದಿಕೆಯ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ. ಶೃಂಗೇರಿ ಮಠದ ಬಳಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಇದನ್ನೂ ಓದಿ: ಡಿ.ಕೆ. ಶಿವಕುಮಾರ್​ ಖಂಡಿತ ಸಿಎಂ ಆಗ್ತಾರೆ: ವಿನಯ್​ ಗೂರುಜಿ ಭವಿಷ್ಯ

ಇದನ್ನೂ ಓದಿ: ವೈಕುಂಠ ಏಕಾದಶಿ: ಬಳ್ಳಾರಿ, ದಾವಣಗೆರೆಯ ವೆಂಕಟೇಶ್ವರ ದೇವಾಲಯಗಳಲ್ಲಿ ಭಕ್ತಸಾಗರ

ABOUT THE AUTHOR

...view details