ಬೆಂಗಳೂರು : ಕೊಡವರಿಗೆ ಪ್ರತ್ಯೇಕ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕವಾಗಿ ಸ್ವಯಂ ರಾಜಕೀಯ ನಿರ್ಣಯಗಳ ಹಕ್ಕು ನೀಡುವ ಸಂಬಂಧ ಸಲ್ಲಿಸಲಾಗಿರುವ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಕೊಡಗು ಜಿಲ್ಲೆಯ ಮೂಲನಿವಾಸಿ ಎಸ್ಸಿ, ಎಸ್ಟಿ, ಬುಡಕಟ್ಟು ಹಾಗೂ ಆದಿವಾಸಿ ಸಮುದಾಯಗಳು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿವೆ.
ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಲ್ಲಿಸಿರುವ ಮನವಿ ಪರಿಗಣಿಸಬೇಕು ಹಾಗೂ ಈ ಸಂಬಂಧ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಸುವ ಪ್ರತ್ಯೇಕ ಆಯೋಗ ರಚಿಸಲು ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಅದರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಮಧ್ಯಂತರ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಹಾಜರಾಗಿ, ''ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಾಡಲಾಗಿರುವ ಮನವಿ ಪರಿಗಣಿಸಲ್ಪಟ್ಟರೆ ಅದು ಇಡೀ ಜಿಲ್ಲೆಯ ಮೂಲನಿವಾಸಿ ಬುಡಕಟ್ಟು ಜನಾಂಗಗಳ ಬದುಕು ಮತ್ತು ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಇದು ಸಾರ್ವಜನಿಕ ಹಿತಾಸಕ್ತ ಅರ್ಜಿ ಆಗಿದ್ದರೂ, ಒಂದು ಸೀಮಿತ ಜಾತಿಗೆ ಲಾಭವನ್ನುಂಟು ಮಾಡಲಿದೆ. ಅರ್ಜಿದಾರರ ಮನವಿ ಪ್ರತ್ಯೇಕ ರಾಜ್ಯದ ಬೇಡಿಕೆಯ ಸ್ವರೂಪದ್ದಾಗಿದೆ. ಮೂಲ ಅರ್ಜಿಯಲ್ಲಿನ ಬೇಡಿಕೆಗಳು ಇಡೀ ಕೊಡಗು ಜಿಲ್ಲೆಯ ಜನತೆ, ಅದರಲ್ಲೂ ವಿಶೇಷವಾಗಿ ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.30ರಷ್ಟು ಇರುವ ಎಸ್ಸಿ-ಎಸ್ಟಿ, ಆದಿವಾಸಿ, ಬುಡಕಟ್ಟು, ಒಬಿಸಿ ವರ್ಗಗಳ ಮೇಲೆ ಪರಿಣಾಮ ಉಂಟು ಮಾಡಲಿದೆ. ಆದ್ದರಿಂದ ಮಧ್ಯಂತರ ಅರ್ಜಿ ವಿಚಾರಣೆಗೆ ಅಂಗೀಕರಿಸಿ, ನಮ್ಮ ಅಹವಾಲು ಆಲಿಸಬೇಕು'' ಎಂದು ಮನವಿ ಮಾಡಿದರು.