ಕರ್ನಾಟಕ

karnataka

ETV Bharat / state

ಸಚಿವ, ಶಾಸಕರುಗಳ ವಿರುದ್ಧದ ಪ್ರಕರಣ ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರ್ಜಿದಾರರು - PETITIONERS WITHDRAWN PETITION

ಅರ್ಜಿಯಲ್ಲಿ ಒಟ್ಟು 43 ಪ್ರಕರಣಗಳನ್ನು ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಅಭಿಯೋಜನೆಯಿಂದ ಹಿಂಪಡೆಯಲು ಸಂಬಂಧಿತ ನ್ಯಾಯಾಲಯಗಳಿಗೆ ಅಗತ್ಯ ಅರ್ಜಿ ಸಲ್ಲಿಸುವಂತೆ ಕೋರಲಾಗಿತ್ತು.

High Court
ಹೈಕೋರ್ಟ್​ (ETV Bharat)

By ETV Bharat Karnataka Team

Published : Nov 1, 2024, 2:27 PM IST

ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಹಾಲಿ ಮತ್ತು ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲಾಗಿದೆ.

ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪ್ರಕರಣದ ಕುರಿತು ಮಾಹಿತಿ ನೀಡಲು ಮುಂದಾದರು. ಇದಕ್ಕೆ ಪೀಠವು ಸಾಮಾಜಿಕ ಹೋರಾಟಗಾರರು, ರೈತರು, ರಾಜಕಾರಣಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯಲಾಗಿದೆ. ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತು. ಹೀಗಾಗಿ, ಅರ್ಜಿದಾರರು ಮನವಿ ಹಿಂಪಡೆದರು.

ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 43 ಪ್ರಕರಣಗಳನ್ನು ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಅಭಿಯೋಜನೆಯಿಂದ ಹಿಂಪಡೆಯಲು ಸಂಬಂಧಿತ ನ್ಯಾಯಾಲಯಗಳಿಗೆ ಅಗತ್ಯ ಅರ್ಜಿ ಸಲ್ಲಿಸಬೇಕು. ಸರ್ಕಾರಿ ಅಭಿಯೋಜಕರಿಗೆ 2024ರ ಅಕ್ಟೋಬರ್‌ 15ರಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರು ಮಾಡಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಯಾರೆಲ್ಲಾ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ?: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಕೇಂದ್ರ ಸಚಿವ ವಿ.ಸೋಮಣ್ಣ, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ನರಗುಂದದ ಬಿ.ಆರ್‌.ಯಾವಗಲ್‌, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್‌, ಕಾಂಗ್ರೆಸ್‌ ಕಲಬುರ್ಗಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ, ಮಾಜಿ ಶಾಸಕರಾದ ದಾವಣಗೆರೆಯ ಎಸ್‌.ಎ.ರವೀಂದ್ರನಾಥ್‌, ಬೆಳಗಾವಿಯ ಸಂಜಯ್‌ ಪಾಟೀಲ್, ಬಾಗಲಕೋಟೆಯ ಡಾ.ವೀರಣ್ಣ ಚರಂತಿಮಠ, ಹೊನ್ನಾಳಿ ಎಂ.ಪಿ.ರೇಣುಕಾಚಾರ್ಯ, ಬೆಳಗಾವಿಯ ಅನಿಲ ಬೆನಕೆ, ಡಾ.ಎಸ್‌.ಸಿದ್ದಯ್ಯ, ಬೆಂಗಳೂರು ಗಾಮಾಂತರ ಜಿಲ್ಲೆಯ ಬಿ.ಶಿವಣ್ಣ, ಭದ್ರಾವತಿಯ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್‌.ಆರ್‌. ಬಸವರಾಜಪ್ಪ, ತುಮಕೂರಿನ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಿ ಹುಲಿಕುಂಟೆ, ಕಲಬುರ್ಗಿ ಜಿಲ್ಲೆಯ ದರ್ಗಾ ಹಜರತ್‌ ಮಲಿಕುಲ್‌ ಮಶಾಲ್‌ಕಹ್‌ ಮಕ್ದೂಮ್‌ ಲಾಡಿ ಅನ್ಸಾರಿ (ಸುನ್ನಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ, ಹುಬ್ಬಳ್ಳಿಯ ಅಂಜುಮಾನ ಇ - ಇಸ್ಲಾಂ ಅಡಿ ರಚಿಸಲಾಗಿದ್ದ ಪರಿಹಾರ ಸಮಿತಿಯ ಸದಸ್ಯರು, ರಾಯಚೂರಿನ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎಸ್‌. ಪ್ರಸಾದ್‌, ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪರವಾಗಿ ಚುಕ್ಕಿ ನಂಜುಂಡಸ್ವಾಮಿ ಅವರು ಶಿವಮೊಗ್ಗ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡದ ರೈತರ ವಿರುದ್ಧದ ಪ್ರಕರಣ, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಎಂ.ಎಸ್‌. ಅಂಗಡಿ, ಮೈಸೂರಿನ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್‌. ಭಾಸ್ಕರ್‌, ಭೀಮ್‌ ಆರ್ಮಿ ಜಿಲ್ಲಾ ಸಮಿತಿಯ ಅಧ್ಯಕ್ಷ ರಾಘು ಚಾಕ್ರಿ, ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯರೆಡ್ಡಿ ಮತ್ತಿತರ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಪ್ರಕರಣಗಳನ್ನು ಹಿಂಪಡೆಯುವಂತೆ ಕೋರಿದ್ದ ಅರ್ಜಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿತ್ತು.

ಇದನ್ನೂ ಓದಿ:ಸಕ್ಷಮ ಪ್ರಾಧಿಕಾರ ಅನುಮತಿ ಇಲ್ಲದೇ ಪೈಲಟ್ ವಿರುದ್ಧ ದಾಖಲಾಗಿದ್ದ ದೂರು ರದ್ದುಪಡಿಸಿದ ಹೈಕೋರ್ಟ್

ABOUT THE AUTHOR

...view details