ಬೆಂಗಳೂರು: ಕರ್ನಾಟಕ ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ)ಕಾಯಿದೆ 2021 ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಡಿ. ಕೇಶವಮೂರ್ತಿ ಎಂಬುವರು ಕಾಯಿದೆ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ವಿಭಾಗೀಯ ಪೀಠ ನಡೆಸಿತು. ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಅಲ್ಲದೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎತ್ತಿರುವ ವಿಚಾರವು ಮಹತ್ವದ್ದಾಗಿದ್ದು, ಸಾಂವಿಧಾನಿಕ ಕಾನೂನಿನ ಕಾರ್ಯಾಚರಣೆಯಲ್ಲಿ ದೂರಗಾಮಿ ಆಯಾಮಗಳನ್ನು ಹೊಂದಿದೆ. ಸುಪ್ರೀಂಕೋರ್ಟ್ ಆದೇಶವು ನೆಲದ ಕಾನೂನಾಗಿದ್ದು, ಅದನ್ನು ಶಾಸನಸಭೆಗಳೂ ಸೇರಿದಂತೆ ಎಲ್ಲರೂ ಪಾಲಿಸಬೇಕು ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನಿನ ಅನ್ವಯ ಅನುಮತಿ ಪಡೆಯದೇ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ದೇವಾಲಯಗಳು, ಚರ್ಚ್, ಮಸೀದಿ, ಗುರುದ್ವಾರ, ಬುದ್ಧ ವಿಹಾರ ಇತ್ಯಾದಿಗಳನ್ನು ರಕ್ಷಿಸುವ ಉದ್ದೇಶದಿಂದ ಆಕ್ಷೇಪಾರ್ಹ ಕಾಯಿದೆ ಜಾರಿಗೊಳಿಸಲಾಗಿದೆ ಎಂದು ವಾದ ಮಂಡಿಸಿದರು.