ಬೆಂಗಳೂರು/ಬೆಳಗಾವಿ:ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್ಒಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್ಒಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದರು.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂಎಲ್ಡಿ, 1996ರಲ್ಲಿ 13.38 ಎಂಎಲ್ಡಿ ಹಾಗೂ 2009ರಲ್ಲಿ 57 ಎಂಎಲ್ಡಿ ಸೇರಿ ಒಟ್ಟು 84 ಎಂಎಲ್ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 1976 ಮತ್ತು 1996ರಲ್ಲಿ ನಿರ್ಮಿಸಿರುವ ಶುದ್ಧೀಕರಣ ಘಟಕಗಳು ಶಿಥಿಲಾವಸ್ಥೆಯಲ್ಲಿವೆ ಎಂದರು.
ಇವುಗಳ ಬದಲು ಹೊಸದಾಗಿ ಶುದ್ಧೀಕರಣ ಘಟಕ ನಿರ್ಮಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ಗಾಜನೂರು ಅರಣ್ಯ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗಿದೆ. ಈ ಸ್ಥಳದಿಂದ ಗುರುತ್ವಾಕರ್ಷಣೆ ಮೂಲಕ ಶಿವಮೊಗ್ಗ ನೀರು ಸರಬರಾಜು ಮಾಡಬಹುದು. ಈ ಸಂಬಂಧ ಸರ್ವೆ ಕಾರ್ಯ ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ತಿಳಿಸಿದರು.