ಕರ್ನಾಟಕ

karnataka

ETV Bharat / state

ಪೋಕ್ಸೋ ಪ್ರಕರಣ: ಇಬ್ಬರು ಯುವಕರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಕೋರ್ಟ್​ - POCSO CASE

2023ರ ಜೂನ್​ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಆರೋಪಿಗಳಿಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಧರ್ಮಸ್ಥಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Additional District and Sessions Court
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ETV Bharat)

By ETV Bharat Karnataka Team

Published : Dec 11, 2024, 12:26 PM IST

ಮಂಗಳೂರು:ಬಾಲಕಿಯೊಬ್ಬಳಿಗೆ ಆಟೋ ರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ಡಿ.ವಿನಯ್ ಶಿಕ್ಷೆ ವಿಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಇಳಂತಿಲ ನಿವಾಸಿ ಬೀಡಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಅಬ್ದುಲ್ ಕರೀಂ (39) ಮತ್ತು ಮೊಗ್ರು ಗ್ರಾಮದ ಪಚ್ಚಡ್ಕ ನಿವಾಸಿ ಆಟೋ ರಿಕ್ಷಾ ಚಾಲಕನಾಗಿದ್ದ ಸಾದಿಕ್ (34) ಶಿಕ್ಷೆಗೊಳಗಾದ ಅಪರಾಧಿಗಳು.

ಮೊದಲ ಆರೋಪಿ ಅಬ್ದುಲ್ ಕರೀಂಗೆ ಪೋಕ್ಸೋ ಕಾಯ್ದೆಯ ಕಲಂ 8 ರಡಿ 5 ವರ್ಷಗಳ ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ ಆರು ತಿಂಗಳ ಸಾದಾ ಸಜೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಕಲಂ 3(1) (ಡಬ್ಲ್ಯು)(ಐ)ರಡಿ 5 ವರ್ಷ ಸಾದಾ ಸಜೆ ಮತ್ತು 5 ಸಾವಿರ ರೂ.ದಂಡ ಪಾವತಿಸಬೇಕು. ಒಂದು ವೇಳೆ, ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಜೆ ವಿಧಿಸಿ ಆದೇಶಿಸಲಾಗಿದೆ. ಅಲ್ಲದೇ ಪರಿಶಿಷ್ಟ ಜಾತಿ, ಪಂಗಡದವರ ದೌರ್ಜನ್ಯ ತಡೆ ಕಾಯಿದೆಯ ಕಲಂ 3(2)(ವಿಎ) ಮತ್ತು ಭಾರತೀಯ ದಂಡ ಸಂಹಿತೆ ಕಲಂ 354ಎ(1)(ಐ)ರಡಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 3 ತಿಂಗಳ ಕಠಿನ ಸಜೆ ವಿಧಿಸಿ ಆದೇಶ ನೀಡಲಾಗಿದೆ.

ಇನ್ನೋರ್ವ ಆರೋಪಿ ಸಾದಿಕ್‌ಗೆ ಪೋಕ್ಸೋ ಕಾಯ್ದೆಯ ಕಲಂ 8ರ ಅಡಿ ಮೂರು ವರ್ಷಗಳ ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಜೆ ವಿಧಿಸಿದ್ದಾರೆ.

2023ರ ಜೂ.18ರಂದು ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯೊಬ್ಬಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಹಣ ಕಟ್ಟಲು ಬಂದಾರು ಗ್ರಾಮದ ನೇಲೊಳ್ದ ಪಲ್ಕೆ ಎಂಬಲ್ಲಿಗೆ ಹೋಗುತ್ತಿದ್ದಾಗ ಆರೋಪಿ ಅಬ್ದುಲ್ ಕರೀಂ ಮತ್ತು ಸಾದಿಕ್ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರತಾಪ್‌ ಸಿಂಗ್ ಥೋರಾಟ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ಈ ಹಿಂದಿನ ವಿಶೇಷ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್​ ನಾಯಕ್ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. ಬಳಿಕ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ವಾದ ಮಂಡಿಸಿದ್ದರು.

ಇದನ್ನೂ ಓದಿ:ಬಿಎಸ್​ವೈ ವಿರುದ್ಧದ ಪೋಕ್ಸೋ ಪ್ರಕರಣ: ಶುಕ್ರವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ABOUT THE AUTHOR

...view details