ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಯರ ತಾಯಿ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೊಲೀಸರು ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ತಮ್ಮ ವಿರುದ್ಧ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಮತ್ತು ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಈ ಮೊದಲಿನ ಪೋಕ್ಸೋ ಕಾಯ್ದೆ ಆರೋಪಗಳ ದೂರಿನಲ್ಲೂ ಇದೇ ರೀತಿಯ ಅಪರಾಧಿಕ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತದನಂತರ ಮಠದ ಅಡುಗೆ ಕೆಲಸದ ಮಹಿಳೆ ನೀಡಿದ ಹೇಳಿಕೆ ಆಧರಿಸಿ ಇಂತಹುದೇ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಇದೀಗ ಮತ್ತೆ ಅದೇ ಸಾಕ್ಷಿ ಮತ್ತು ದೂರಿನ ಅಂಶಗಳ ಮೇಲೆ ಅರ್ಜಿದಾರರನ್ನು ಬಂಧಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫಿರ್ಯಾದುದಾರರು ಮನವಿ ಮಾಡಿದ್ದಾರೆ. ಈ ಮೊದಲಿನ ಪ್ರಕರಣದಲ್ಲಿ ಈಗಾಗಲೇ 13 ಸಾಕ್ಷಿಗಳ ವಿಚಾರಣೆ ಮುಗಿದಿರುವ ಕಾರಣ ಅರ್ಜಿದಾರರು ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದರು.