ದೇವನಹಳ್ಳಿ (ಬೆಂಗಳೂರು) : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಸೋಮವಾರ ವಿಚಾರಣೆ ಹೋಗುವುದಾಗಿ ಹೇಳಿದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿಗದಿತ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಹೋಗಿದ್ದೆ. 17 ರಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ತಡೆಯಾಜ್ಞೆ ನೀಡಿದೆ. ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ ಎಂದರು.
ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದ್ರು. ನಾನು ಯಾರ ಮೇಲೆ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನು ಅಂತ ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡ್ತಿದ್ದಾರೋ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಯಡಿಯೂರಪ್ಪಗೆ ರಿಲೀಫ್: ಪೋಕ್ಸೋಆರೋಪದಲ್ಲಿ ಸಿಐಡಿ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ನಿರ್ದೆಶನ ನೀಡಿದೆ. ಇದರಿಂದಾಗಿ ಮಾಜಿ ಸಿಎಂ ಸದ್ಯಕ್ಕೆ ಬಂಧನ ಭೀತಿಯಿಂದ ನಿರಾಳರಾಗಿದ್ದಾರೆ.
ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಕೋರಿ ಮತ್ತು ಈ ಸಂಬಂಧ ಬಂಧನ ಭೀತಿ ಹಿನ್ನೆಲೆಯಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೂ ಬಂಧನದಂತ ಕಠಿಣ ಕ್ರಮಕ್ಕೆ ಮುಂದಾಗದಂತೆ ಸೂಚನೆ ನೀಡಿದೆ.
ಪ್ರಕರಣದ ವಿಚಾರಣೆಗೆ ಹಾಜರಾಗಲು ಸೂಚಿಸಿ ಸಿಐಡಿ ಪೊಲೀಸರು ಎರಡನೇ ನೋಟಿಸ್ ಜಾರಿ ಮಾಡಿದ್ದರಿಂದ ಮತ್ತು ನಗರದ 1ನೇ ತ್ವರಿತಗತಿ ನ್ಯಾಯಾಲಯ (ಪೋಕ್ಸೋ ವಿಶೇಷ ನ್ಯಾಯಾಲಯ) ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿತ್ತು. ಆದರೆ, ಹೈಕೋರ್ಟ್ ಆದೇಶದಿಂದ ಈಗ ನಿರಾಳರಾಗಿದ್ದಾರೆ.
ಸರ್ಕಾರದ ವಾದ ತಳ್ಳಿ ಹಾಕಿರುವ ನ್ಯಾಯಪೀಠ, ಯಡಿಯೂರಪ್ಪ ಅವರನ್ನು ಬಂಧಿಸಬಾರದು. ಸಿಐಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಜ.17ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತು. ಜೊತೆಗೆ, ಅರ್ಜಿ ಕುರಿತು ಸಿಐಡಿ ಪೊಲೀಸರು ಮತ್ತು ಪ್ರಕರಣದ ದೂರುದಾರ ಮಹಿಳೆಯ ಪುತ್ರನಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜು.28ಕ್ಕೆ ಮುಂದೂಡಿತು.
ಸಿಐಡಿಗೆ ನೋಟಿಸ್:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ನಿರ್ದೇಶಿಸುವಂತೆ ಕೋರಿ ದೂರುದಾರ ಮಹಿಳೆ ಪುತ್ರ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠವು, ಸಿಐಡಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರು, ಸಿಐಡಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಪ್ರಕರಣದಲ್ಲಿ ಆರೋಪಿಯೂ ಆಗಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಯಡಿಯೂರಪ್ಪ ಅವರು ನನ್ನ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಕುರಿತು ತಾಯಿ 2024ರ ಮಾ.14ರಂದು ಸದಾಶಿವನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ಗೆ ದೂರು ನೀಡಿದ್ದರು. ಪೊಲೀಸರು ಪೋಕ್ಸೋ ಕಾಯ್ದೆ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿ ಅಪ್ರಾಪ್ತೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು. ಆದರೆ, ದೂರು ದಾಖಲಾಗಿ ಎರಡು ತಿಂಗಳು ಕಳೆದರೂ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಸಿಸಿಟಿವಿ ದೃಶ್ಯಗಳು, ಮೆಮೊರಿಕಾರ್ಡ್ ಮತ್ತು ಹಾರ್ಡ್ ಡಿಸ್ಕ್ ವಶಪಡಿಸಿಕೊಂಡು, ಒಂದು ತಿಂಗಳ ಒಳಗೆ ವರದಿ ಸಲ್ಲಿಸಲು ನಗರ ಪೊಲೀಸ್ ಆಯುಕ್ತರು ಮತ್ತು ಸಿಐಡಿ ಇನ್ಸ್‌ಪೆಕ್ಟರ್‌ಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.